ಬಂಟ್ವಾಳ, ಜೂ. 5: ಎಂಡಿಎಂಎ ಮಾದಕ ವಸ್ತುವನ್ನು ಸಾಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದು, ಅವರಿಂದ ₹7.64 ಲಕ್ಷ ಮೌಲ್ಯದ ಎಂಡಿಎಂಎ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಜೂನ್ 4ರಂದು ಸಂಜೆ ಮೆಲ್ಕಾರ್ ಫ್ಲೈಓವರ್ ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಸಿಬ್ಬಂದಿ ಕಾರೊಂದನ್ನು ತಡೆದು ಪರಿಶೀಲಿಸಿದರು. ಕಾರಿನಲ್ಲಿ ಚಾಲಕ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು.
ಪರಿಶೀಲನೆ ವೇಳೆ ಮಾದಕ ವಸ್ತು ಸೇವನೆಗೆ ಬಳಸುವ ಸಾಧನ ಪತ್ತೆಯಾದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದಾಗ, ಆರೋಪಿಗಳು ಬಂಟ್ವಾಳ ಪುದು ನಿವಾಸಿ ಎ. ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಅಲಿಯಾಸ್ ಮಾರಿಮುತ್ತು ಎಂದು ಗುರುತಿಸಲಾಯಿತು.
ತಪಾಸಣೆ ವೇಳೆ ಆರೋಪಿಗಳ ಬಳಿ ಹಾಗೂ ಕಾರಿನೊಳಗೆ ಒಟ್ಟು 76.40 ಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹7,64,000 ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ ಎಂಡಿಎಂಎ, ಮಾದಕ ವಸ್ತು ಸೇವನೆಗೆ ಬಳಸುವ ಸಾಧನ, ಮೂರು ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಕೆಎ–19 ಎಂಆರ್–1997 ನೋಂದಣಿಯ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!