ಮಂಗಳೂರು, ಜೂನ್ 6: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಎಂಡಿಎಂಎ (MDMA) ಮಾದಕವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ಸುಮಾರು ₹16.40 ಲಕ್ಷ ಎಂದು ಅಂದಾಜಿಸಲಾಗಿದೆ.
ಮೊದಲ ಪ್ರಕರಣದಲ್ಲಿ, ಬೆಂಗಳೂರು ನಗರದಿಂದ ಎಂಡಿಎಂಎ ತಂದು ಮಂಗಳೂರಿನ ಹೊಯಿಗೆ ಬಜಾರ್ ಪ್ರದೇಶದಲ್ಲಿರುವ ಮನೆಯಿಂದ ಮಾರಾಟ ಮಾಡುತ್ತಿದ್ದ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಜೂನ್ 5ರಂದು ದಾಳಿ ನಡೆಸಿದರು. ಈ ವೇಳೆ ಪ್ರಣಾಮ್ ಕೋಟ್ಯಾನ್ (30) ಎಂಬಾತನನ್ನು ಬಂಧಿಸಿ, ಆತನಿಂದ ₹10.40 ಲಕ್ಷ ಮೌಲ್ಯದ 104 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಜಿಪ್‌ಲಾಕ್ ಕವರ್‌ಗಳು ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಂಡರು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಣಾಮ್ ಕೋಟ್ಯಾನ್ ವಿರುದ್ಧ ಈ ಹಿಂದೆ ಹಲ್ಲೆ, ಬೆದರಿಕೆ, ಮಾದಕವಸ್ತು ಸೇವನೆ ಹಾಗೂ ಗಾಂಜಾ ಸಂಬಂಧಿತ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡನೇ ಪ್ರಕರಣದಲ್ಲಿ, ಪದವಿನಂಗಡಿ ಸಮೀಪದ ಮನೆಯಿಂದ ಎಂಡಿಎಂಎ ಮಾರಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಧನರಾಜ್ ಪೂಜಾರಿ @ ಧನು ವಳಚಿಲ್ (33) ಎಂಬಾತನನ್ನು ಬಂಧಿಸಿದರು. ಆತನಿಂದ ₹6 ಲಕ್ಷ ಮೌಲ್ಯದ 60 ಗ್ರಾಂ ಎಂಡಿಎಂಎ, ಜಿಪ್‌ಲಾಕ್ ಕವರ್‌ಗಳು, ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧನರಾಜ್ ಪೂಜಾರಿ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳು ಹಾಗೂ ಬಂಟ್ವಾಳ ಠಾಣೆಯಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ ಮತ್ತು ಬೆದರಿಕೆ ಸೇರಿದಂತೆ ಸುಮಾರು 12 ಪ್ರಕರಣಗಳು ದಾಖಲಾಗಿವೆ. 2016ರಲ್ಲಿ ಸುರತ್ಕಲ್ ಠಾಣೆಯಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಪ್ರಕರಣದಲ್ಲಿ ಆತನಿಗೆ ಮೂರು ವರ್ಷಗಳ ಶಿಕ್ಷೆಯೂ ವಿಧಿಸಲಾಗಿತ್ತು.
ಮಾದಕವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದ್ದಾರೆ.






