ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ಕಾರ್ಯಕರ್ತರ ಸಮಾವೇಶವು ಪಡೀಲಿನ ಟ್ರಿನಿಟಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ಮಾತನಾಡಿ, ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ ಚುನಾವಣೆಗಳಿಗೆ ಕಾರ್ಯಕರ್ತರು ಸಜ್ಜಾಗುವಂತೆ ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮೊಹಮ್ಮದ್ ತುಂಬೆ ಮಾತನಾಡಿ, ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಬಿಜೆಪಿ ವಿರೋಧ ಪಕ್ಷಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ದೊರೆತಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ಮುಸ್ಲಿಮರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದೂ ಟೀಕಿಸಿದರು.
ಜಿಲ್ಲಾ ಅಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿ, ಎಸ್‌ಡಿಪಿಐ ಕ್ಯಾಡರ್ ಆಧಾರಿತ ಹಾಗೂ ಆಂತರಿಕ ಪ್ರಜಾಪ್ರಭುತ್ವ ಹೊಂದಿರುವ ಪಕ್ಷವಾಗಿದ್ದು, ಕಾರ್ಯಕರ್ತರ ರಾಜಕೀಯ ಸಬಲೀಕರಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ರಾಜ್ಯ ಸಮಿತಿ ಸದಸ್ಯ ಅಡ್ವೊಕೇಟ್ ಅಶ್ರಫ್ ಅಗ್ನಾಡಿ ಮಾತನಾಡಿ, ರಾಜ್ಯ ಸರ್ಕಾರದ ನೀತಿಗಳು ಹಾಗೂ ಚುನಾವಣಾ ಭರವಸೆಗಳ ಅನುಷ್ಠಾನದ ಕುರಿತು ಟೀಕಿಸಿದರು. ಮತ್ತೋರ್ವ ರಾಜ್ಯ ಸಮಿತಿ ಸದಸ್ಯ ಅಡ್ವೊಕೇಟ್ ಮಜೀದ್ ಖಾನ್ ಸಮಾರೋಪ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಕ್ಷೇತ್ರ ಸಮಿತಿ ಉಪಾಧ್ಯಕ್ಷ ಸುಲೈಮಾನ್ ಬಿ.ಕೆ., ಕಾರ್ಯದರ್ಶಿ ಇಸ್ಮಾಯಿಲ್ ಕೆಮ್ಮಾಯಿ, ಕೋಶಾಧಿಕಾರಿ ಸದ್ದಾಂ ಮುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪದಾಧಿಕಾರಿಗಳ ಪದಗ್ರಹಣ
ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವೂ ನಡೆಯಿತು. ಕ್ಷೇತ್ರ ಕಾರ್ಯದರ್ಶಿ ಉಸ್ಮಾನ್ ಎ.ಕೆ. ಧನ್ಯವಾದ ಅರ್ಪಿಸಿದರು. ಜೊತೆ ಕಾರ್ಯದರ್ಶಿ ರಹೀಮ್ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು.







