ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ (Monsoon 2026) ಬಿರುಸಿನ ಆರಂಭ ಪಡೆದುಕೊಂಡಿದ್ದು, ಜೂನ್ 8 (ಇಂದಿನಿಂದ) ಮುಂದಿನ 48 ಗಂಟೆಗಳ ಕಾಲ ಕರ್ನಾಟಕದಾದ್ಯಂತ ವರುಣನ ಆರ್ಭಟ ತೀವ್ರಗೊಳ್ಳಲಿದೆ.
ನೈಋತ್ಯ ಮುಂಗಾರು ಮಾರುತಗಳು ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತ್ಯಂತ ಸಕ್ರಿಯವಾಗಿ ಇರುವುದರಿಂದ, ಹಲವು ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಈಗಾಗಲೇ ಆರೆಂಜ್ (Orange Alert) ಮತ್ತು ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ.
ಕರಾವಳಿರ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅದ್ರಲ್ಲೂ ಪಶ್ಚಿಮ ಘಟ್ಟದ ತಟದ ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆ ಅಲರ್ಟ್ ಘೋಷಿಸಲಾಗಿದೆ ?
ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಎಫೆಕ್ಟ್ ಕರ್ನಾಟಕಕ್ಕೂ ತಟ್ಟಿದೆ. ಅದ್ರಲ್ಲೂ ರಾಜ್ಯ ಜಿಲ್ಲೆಗಳನ್ನು ಹವಾಮಾನ ಇಲಾಖೆ ಎರಡು ಭಾಗಗಳಾಗಿ ಎಚ್ಚರಿಕೆ ನೀಡಿದೆ:
ಆರೆಂಜ್ ಅಲರ್ಟ್ (Heavy to Very Heavy Rain):
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು. ಇಲ್ಲಿ ಕೆಲವು ಕಡೆಗಳಲ್ಲಿ 11 ಸೆಂಟಿಮೀಟರ್‌ನಿಂದ 20 ಸೆಂಟಿಮೀಟರ್‌ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಯೆಲ್ಲೋ ಅಲರ್ಟ್ (Heavy Rain):
ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು. ಈ ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ.
ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಆತಂಕ ಸೃಷ್ಟಿಸಿದ ಮಳೆ
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಘಟ್ಟ ಪ್ರದೇಶಗಳಾದ ಆಗುಂಬೆ, ಚಾರ್ಮಾಡಿ ಹಾಗೂ ಶಿರಾಡಿ ಘಾಟ್‌ಗಳಲ್ಲಿ ಮುಂಜಾನೆ ದಟ್ಟವಾದ ಮಂಜು ಕವಿಯುತ್ತಿದ್ದು, ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸಣ್ಣಪುಟ್ಟ ಭೂಕುಸಿತದ ಭೀತಿ ಇರುವುದರಿಂದ ರಾತ್ರಿ ವೇಳೆ ಈ ಮಾರ್ಗಗಳಲ್ಲಿ ಸಂಚರಿಸುವವರು ಜಾಗರೂಕರಾಗಿ ಇರಲು ಸ್ಥಳೀಯ ಆಡಳಿತ ಸೂಚಿಸಿದೆ. ನದಿ ತೀರದ ಜನರಿಗೂ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
ಒಳನಾಡಿನಲ್ಲಿ ಮಳೆ ಹೇಗೆ ಇರಲಿದೆ ?
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕಲ್ಬುರ್ಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಚದುರಿದ ಮಳೆಯಾಗಬಹುದು.






