ಮಂಗಳೂರಿನಲ್ಲಿ ಮಾದಕ ವಸ್ತು ಜಾಲಕ್ಕೆ ಪೊಲೀಸರ ಬಿಗಿ ಕ್ರಮ: ಮೂವರು ಆರೋಪಿಗಳ ಬಂಧನ

ಮಂಗಳೂರು: ನಿಷೇಧಿತ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಜೂನ್ 8ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್‌ಶೆಡ್ ಪ್ರದೇಶದಲ್ಲಿ ಎಂಡಿಎಂಎ (MDMA) ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಜನನ್ ಜಗನ್ನಾಥ್ (29) ಮತ್ತು ಪರೀಕ್ಷಿತ್ (33) ಎಂಬವರನ್ನು ಬಂಧಿಸಲಾಗಿದೆ.

ಪೊಲೀಸರು ನಡೆಸಿದ ದಾಳಿಯಲ್ಲಿ ಆರೋಪಿಗಳಿಂದ ಸುಮಾರು 11.68 ಗ್ರಾಂ ಎಂಡಿಎಂಎ, ₹1,110 ನಗದು, ಮೂರು ಮೊಬೈಲ್ ಫೋನ್‌ಗಳು ಹಾಗೂ ಒಂದು ತೂಕ ಮಾಪಕವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಇದೇ ವೇಳೆ, ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಮತ್ತೊಂದು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಸುಶಾನ್ ಪೂಜಾರಿ (27) ಎಂಬ ಆರೋಪಿಯನ್ನು ಪೊಲೀಸರು ಜೂನ್ 9ರಂದು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಪ್ರಣಮ್ ಕೋಟ್ಯಾನ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಪ್ರಕರಣದ ತನಿಖೆ ಮುಂದುವರಿದಿದ್ದು, ಮಾದಕ ವಸ್ತು ಜಾಲದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!