ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂ.15ರಿಂದ ಜು.15ರವರೆಗೆ ಒಂದು ತಿಂಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆ ಆಡಳಿತಕ್ಕೆ ಮನವಿ ಸಲ್ಲಿಸಿದೆ.
ಬೊಳುವಾರು–ಸೇಡಿಯಾವು ನಡುವಿನ ಚತುಷ್ಪಥ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ರಸ್ತೆ ಕಿರಿದಾಗಿರುವ ಕಾರಣ ಕಾಮಗಾರಿ ಅವಧಿಯಲ್ಲಿ ದ್ವಿಮುಖ ವಾಹನ ಸಂಚಾರ ಸಾಧ್ಯವಿಲ್ಲ. ಹೀಗಾಗಿ ಸಾರ್ವಜನಿಕರ ಸುರಕ್ಷತೆ ಹಾಗೂ ಕಾಮಗಾರಿ ಸುಗಮ ನಿರ್ವಹಣೆ ದೃಷ್ಟಿಯಿಂದ ಈ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಅಗತ್ಯವಿದೆ ಎಂದು ಇಲಾಖೆಯು ತಿಳಿಸಿದೆ.
ಪ್ರಸ್ತಾವಿತ ಬದಲಿ ಮಾರ್ಗದಂತೆ, ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುವ ವಾಹನಗಳು ಖಾಸಗಿ ಬಸ್ ನಿಲ್ದಾಣ ಮಾರ್ಗವಾಗಿ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆ ಮೂಲಕ ಕೋಟೆಚಾ ಹಾಲ್ ಮುಖಾಂತರ ಉಪ್ಪಿನಂಗಡಿ ರಸ್ತೆಯನ್ನು ಸಂಪರ್ಕಿಸಬೇಕು. ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುವ ವಾಹನಗಳು ಕೋಟೆಚಾ ಹಾಲ್ ಮೂಲಕ ಎಪಿಎಂಸಿ ರಸ್ತೆಯಾಗಿ ಪುತ್ತೂರು ಮುಖ್ಯ ರಸ್ತೆಯನ್ನು ಸಂಪರ್ಕಿಸಬೇಕಾಗಿದೆ.
ಈ ಕುರಿತು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ಪತ್ರ ಬರೆದು ಅಗತ್ಯ ಅನುಮತಿ ಹಾಗೂ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಕೋರಿದ್ದಾರೆ. ಸಾರ್ವಜನಿಕರು ಬದಲಿ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ.






