ಬೆಳ್ತಂಗಡಿ: ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ವಿವಾಹಿತ ಮಹಿಳೆಯೊಬ್ಬರು, 2023ರ ಡಿಸೆಂಬರ್ ತಿಂಗಳಲ್ಲಿ ತಮ್ಮ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಜೂನ್ 7ರಂದು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಹಾಗೂ ಪ್ರಸ್ತುತ ಅರಸಿನಮಕ್ಕಿ ಗ್ರಾಮದಲ್ಲಿ ಗ್ರಾಮೀಣ ಅಂಚೆ ವಿತರಕರಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಶ್ (35) ಅವರನ್ನು ಜೂನ್ 8ರಂದು ರಾತ್ರಿ ಬಂಧಿಸಿದರು.
ವಿಚಾರಣೆ ಬಳಿಕ ಆರೋಪಿಯನ್ನು ಜೂನ್ 9ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಧರ್ಮಸ್ಥಳ ಪ್ರಭಾರ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ., ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್. ಗಾಣಿಗೇರ ಹಾಗೂ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿತು.







