ಪುತ್ತೂರು: ಪೋಕ್ಸೋ ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನರಿಮೊಗರು ನಿವಾಸಿ ನಮನ್ ನಾಯಕ್ (32) ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 448, 506, 354 ಹಾಗೂ ಪೋಕ್ಸೋ ಕಾಯ್ದೆಯ ಕಲಂ 12ರಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಹಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು.
ಆರೋಪಿಯ ಸುಳಿವು ಪತ್ತೆಹಚ್ಚಿದ ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದರು. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.







