ಪುತ್ತೂರು, ಜೂ.13: ಶಿಕ್ಷಣವು ಮನುಷ್ಯನಲ್ಲಿ ಈಗಾಗಲೇ ಅಡಕವಾಗಿರುವ ಪರಿಪೂರ್ಣತೆಯ ಅಭಿವ್ಯಕ್ತಿಯಾಗಿದ್ದು, ಜ್ಞಾನದ ಜೊತೆಗೆ ಜೀವನ ಮೌಲ್ಯಗಳನ್ನು ಬೆಳೆಸುವುದೇ ಶಿಕ್ಷಣದ ಮುಖ್ಯ ಉದ್ದೇಶ ಎಂದು ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ವಿಶಾಲ್ ಪಿಂಟೋ ಹೇಳಿದರು.
ಅವರು ಶನಿವಾರ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪ್ರಸ್ತುತ ಕಾಲಘಟ್ಟದಲ್ಲಿ ಜ್ಞಾನ ಮತ್ತು ಆರೋಗ್ಯ ಅತ್ಯಂತ ಪ್ರಮುಖ ಅಂಶಗಳಾಗಿದ್ದು, ವಿದ್ಯಾರ್ಥಿಗಳು ಈ ಎರಡರ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು. ಕಠಿಣ ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳು ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಬಲ್ಲವು ಎಂದು ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಹೂಗುಚ್ಛ ನೀಡಿ ಅಭಿನಂದಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಅಭಿನಂದಿಸಿ, ಈ ವೇದಿಕೆಯು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದರು. ನಾಯಕತ್ವವು ಸೇವಾ ಮನೋಭಾವ, ಜವಾಬ್ದಾರಿ ಹಾಗೂ ಉತ್ತಮ ವ್ಯಕ್ತಿತ್ವಗಳ ಸಂಯೋಜನೆಯಾಗಿದ್ದು, ವಿದ್ಯಾರ್ಥಿಗಳು ಈ ಗುಣಗಳನ್ನು ತಮ್ಮಲ್ಲಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಗುಣಿಕಾ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ., ಜಂಟಿ ಕಾರ್ಯದರ್ಶಿ ಸಂದೇಶ್ ಗೌಡ ಎಸ್.ಕೆ. ಸೇರಿದಂತೆ ತರಗತಿ ಪ್ರತಿನಿಧಿಗಳು ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳಿಗೆ ಪ್ರಾಂಶುಪಾಲರು ಪ್ರಮಾಣ ವಚನ ಬೋಧಿಸಿದರು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ದಿವ್ಯಾ ಅನಿಲ್ ರೈ ಹಾಗೂ ಪ.ಪೂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಶ್ರೀಪ್ರಕಾಶ್ ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಗುಣಿಕಾ ಗುರುಪ್ರಸಾದ್ ಸ್ವಾಗತಿಸಿದರು. ಕಾರ್ಯದರ್ಶಿ ಲಯ ತೇಜ ಎ. ಅತಿಥಿಗಳನ್ನು ಪರಿಚಯಿಸಿದರು. ಜಂಟಿ ಕಾರ್ಯದರ್ಶಿ ಸಂದೇಶ್ ಗೌಡ ಎಸ್.ಕೆ. ವಂದಿಸಿದರು. ವಿದ್ಯಾರ್ಥಿನಿ ಸ್ವಿನಿಕಾ ವಿಯೋಲ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.







