ಮಂಗಳೂರು, ಜೂನ್ 13: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಅರಿಕೆರೆ ಪ್ರದೇಶದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವನ್ನು ಪಣಂಬೂರು ಪೊಲೀಸರು ಅತಿ ಶೀಘ್ರದಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜೂನ್ 10ರಂದು ಬೆಳಿಗ್ಗೆ ಜೋಕಟ್ಟೆ ಅರಿಕೆರೆ ಸಮೀಪದ ಎಂಎಸ್‌ಇಝಡ್‌ಗೆ ಸೇರಿದ ನೀರು ಹರಿಯುವ ತೋಡಿನಲ್ಲಿ ಸುಮಾರು 35-40 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಕುರಿತು ಕಿಶೋರ್ ಎಂಬವರು ನೀಡಿದ ದೂರಿನ ಮೇರೆಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿತ್ತು.
ತನಿಖೆಯ ವೇಳೆ ಮೃತನನ್ನು ಚಂದನ್ ಚೌಹಾನ್ (39), ಬಿಹಾರ ಮೂಲದ ನಿವಾಸಿ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಪ್ರಶಾಂತ್ ಕುಮಾರ್ (36) ಎಂಬಾತನನ್ನು ಜೂನ್ 13ರ ಮುಂಜಾನೆ ಗೋವಾದ ಮಡಗಾಂವ್ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಪಿಂಕೂ ಮಹ್ತೋ (33) ಎಂಬಾತನನ್ನು ಜೋಕಟ್ಟೆ ಪ್ರದೇಶದಲ್ಲೇ ವಶಕ್ಕೆ ಪಡೆಯಲಾಗಿದೆ.
ಪೊಲೀಸರ ತನಿಖೆಯಲ್ಲಿ, ಆರೋಪಿ ಪ್ರಶಾಂತ್ ಕುಮಾರ್ ಅವರ ಪತ್ನಿ ಕಳೆದ ಏಪ್ರಿಲ್ ತಿಂಗಳಲ್ಲಿ ಮತ್ತೊಬ್ಬ ಯುವಕನೊಂದಿಗೆ ಮನೆ ಬಿಟ್ಟು ಹೋಗಿದ್ದು, ಇದಕ್ಕೆ ಚಂದನ್ ಚೌಹಾನ್ ಸಹಾಯ ಮಾಡಿದ್ದಾನೆ ಎಂಬ ಅನುಮಾನ ಪ್ರಶಾಂತ್‌ಗೆ ಇತ್ತು. ಅಲ್ಲದೆ, ಪ್ರಶಾಂತ್ ಕುರಿತು ಚಂದನ್ ಅಪಪ್ರಚಾರ ಮಾಡುತ್ತಿದ್ದಾನೆ ಎಂಬ ಕಾರಣಕ್ಕೆ ಇಬ್ಬರು ಆರೋಪಿಗಳು ಆಕ್ರೋಶಗೊಂಡಿದ್ದರು ಎನ್ನಲಾಗಿದೆ.
ಜೂನ್ 9ರಂದು ಸಂಜೆ ಇಬ್ಬರು ಆರೋಪಿಗಳು ಸೇರಿ ಚಂದನ್‌ನ ತಲೆ ಮತ್ತು ಮುಖಕ್ಕೆ ದೊಣ್ಣೆಯಿಂದ ಹಲ್ಲೆ ನಡೆಸಿ, ಬಳಿಕ ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದರು. ನಂತರ ಮೃತದೇಹವನ್ನು ಜೋಕಟ್ಟೆಯ ಬಾಡಿಗೆ ಮನೆಯ ಸಮೀಪದ ತೋಡಿಗೆ ಎಸೆದಿರುವುದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀಕಾಂತ್ ಕೆ. ಅವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದ ತಂಡ ಪ್ರಕರಣವನ್ನು ಭೇದಿಸಿದೆ. ಉಪನಿರೀಕ್ಷಕರಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ್ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್, ಸುರೇಂದ್ರ, ಚೆರಿಯನ್, ದೀಪಕ್, ಫಕ್ಕಿರೇಶ್, ರಾಕೇಶ್ ಮತ್ತು ಮಂಜುನಾಥ್ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!