ಮಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯನ್ನು ಮಂಗಳೂರಿನಲ್ಲಿ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೆಗೆದುಕೊಂಡಿರುವ ನಿರ್ಧಾರವನ್ನು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಸ್ವಾಗತಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಚಿವ ಸಂಪುಟ ಸಭೆಯು ಕೇವಲ ಔಪಚಾರಿಕ ಕಾರ್ಯಕ್ರಮವಾಗದೆ, ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸುವ ವೇದಿಕೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಗಮನ ನೀಡುವ ಮೂಲಕ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸರ್ಕಾರ ಮುಂದಾಗಬೇಕು ಎಂದು ತಿಳಿಸಿದ್ದಾರೆ.
ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ನೀತಿ ರೂಪಿಸುವುದು, ಪುತ್ತೂರನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಿಸುವುದು, ಹದಗೆಟ್ಟಿರುವ ರಸ್ತೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪಿಸುವುದು ಹಾಗೂ ಬಂದರು ಮತ್ತು ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಅಲ್ಲದೆ, ಅಡಿಕೆ ಬೆಳೆಗಾರರು ಹಾಗೂ ಮೀನುಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಜಿಲ್ಲೆಯಲ್ಲಿರುವ 94ಸಿ ಮತ್ತು ಅಕ್ರಮ-ಸಕ್ರಮ ಯೋಜನೆಯ ಸುಮಾರು 1.27 ಲಕ್ಷ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಅವರು ಹೇಳಿದ್ದಾರೆ.
ಕೆಂಪುಕಲ್ಲು ಮತ್ತು ಮರಳು ನೀತಿಗಳಲ್ಲಿನ ಗೊಂದಲ ನಿವಾರಿಸಿ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳನ್ನು ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯು ಕರಾವಳಿಯ ಸಮಗ್ರ ಅಭಿವೃದ್ಧಿಗೆ ದಿಕ್ಕು ತೋರಿಸುವ ಮಹತ್ವದ ಸಭೆಯಾಗಲಿ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!