ವಿಟ್ಲ: ಟಿಪ್ಪರ್ ಲಾರಿಯ ತಾಂತ್ರಿಕ ದೋಷವನ್ನು ಸರಿಪಡಿಸುತ್ತಿದ್ದ ವೇಳೆ ಲಾರಿ ಹಠಾತ್ ಹಿಂದಕ್ಕೆ ಚಲಿಸಿದ ಪರಿಣಾಮ ಚಾಲಕ ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು–ಪೆರೋಡಿ ಸರವುಗುಡ್ಡೆ ಪ್ರದೇಶದಲ್ಲಿ ಬುಧವಾರ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಬಂದಾರು ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಹೊರರಾಜ್ಯಗಳಿಗೆ ಸಾಗಾಟವಾಗುತ್ತಿದ್ದ ಮಣ್ಣಿನ ತೆರವು ಕಾರ್ಯಕ್ಕಾಗಿ ಮಹೇಶ್ ಚಾಲನೆ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಸ್ಥಳಕ್ಕೆ ತರಲಾಗಿತ್ತು. ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಲಾರಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹೇಶ್ ವಾಹನವನ್ನು ನಿಲ್ಲಿಸಿ ಅದರ ಕೆಳಭಾಗಕ್ಕೆ ಇಳಿದು ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು.
ಈ ವೇಳೆ ಲಾರಿ ಏಕಾಏಕಿ ಹಿಂದಕ್ಕೆ ಚಲಿಸಿದ್ದು, ಅದರ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್ ಮುಂದಿನ ಚಕ್ರದಡಿಗೆ ಸಿಲುಕಿದ್ದಾರೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಆಂಬ್ಯುಲೆನ್ಸ್ ಸಿಬ್ಬಂದಿ ಮೃತದೇಹವನ್ನು ಲಾರಿಯ ಅಡಿಯಿಂದ ಹೊರತೆಗೆದು ವಿಟ್ಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.







