ಕಡಬ: ಆಲಂಕಾರು ಪೇಟೆಯಲ್ಲಿ ಹೋಟೆಲ್‌ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಅವರ ಪತ್ನಿ ಸಿದ್ದಕಟ್ಟೆಯ ಸಂಗೀತ ದಂಪತಿ ಆಲಂಕಾರು ಕಜೆ ಸಮೀಪದ ಬಾಡಿಗೆ ಮನೆಯಲ್ಲಿ ಶುಕ್ರವಾರ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪತ್ನಿಯನ್ನು ಕೊಲೆಗೈದ ಬಳಿಕ ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ದಂಪತಿ ತಮ್ಮ ಎರಡು ವರ್ಷದ ಪುತ್ರಿ ಧ್ರುವಿಯೊಂದಿಗೆ ವಾಸವಾಗಿದ್ದರು. ಸುಮಾರು ಒಂದು ತಿಂಗಳ ಹಿಂದೆ ಆಲಂಕಾರು ಪೇಟೆಯಲ್ಲಿದ್ದ ಹೋಟೆಲ್‌ ವ್ಯವಹಾರವನ್ನು ಸ್ಥಗಿತಗೊಳಿಸಿ ತೆರಳಿದ್ದ ಅವರು, ಗುರುವಾರ ಸಂಜೆ ಮತ್ತೆ ಆಲಂಕಾರು ಕಜೆಯ ಬಾಡಿಗೆ ಮನೆಗೆ ಬಂದಿದ್ದರು ಎನ್ನಲಾಗಿದೆ.
ಶುಕ್ರವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಮನೆಯ ಒಳಗಿನಿಂದ ಚಿಲಕ ಹಾಕಲಾಗಿತ್ತು. ದಂಪತಿಯ ಎರಡು ವರ್ಷದ ಪುತ್ರಿ ಅತ್ತುಕೊಂಡಿದ್ದ ಬಳಿಕ ಮತ್ತೆ ನಿದ್ರೆಗೆ ಜಾರಿದ್ದಳು ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಡಬ ಪೊಲೀಸ್ ಠಾಣೆಯ ಉಪನಿರೀಕ್ಷಕ ಜಂಬುರಾಜ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!