ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಪುತ್ತೂರು ಉಪ ವಿಭಾಗದ ವತಿಯಿಂದ ಜೂನ್ 26ರಂದು ‘ಫಿಟ್ ಇಂಡಿಯಾ – ಮಾದಕ ದ್ರವ್ಯ ಮುಕ್ತ 5ಕೆ ಮ್ಯಾರಥಾನ್’ ಆಯೋಜಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮ್ಯಾರಥಾನ್‌ಗೆ ಚಾಲನೆ ದೊರೆಯಲಿದೆ.
ಮ್ಯಾರಥಾನ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಿಂದ ಆರಂಭವಾಗಿ ದರ್ಬೆ ವೃತ್ತ, ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಮಾರ್ಗವಾಗಿ ಸಂಚರಿಸಿ ಮತ್ತೆ ದೇವಸ್ಥಾನದ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ.
ಮಹಿಳೆಯರು ಹಾಗೂ ಪುರುಷರು ಸೇರಿದಂತೆ ಎಲ್ಲರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಭಾಗವಹಿಸಲು ಇಚ್ಛಿಸುವವರು ದಕ್ಷಿಣ ಕನ್ನಡ ಜಿಲ್ಲೆಯ ತಮ್ಮ ಸಮೀಪದ ಪೊಲೀಸ್ ಠಾಣೆಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಅಲ್ಲದೆ, https://forms.gle/3UKZUXEmnTpws7qK8⁠� ಲಿಂಕ್ ಮೂಲಕ ಆನ್‌ಲೈನ್‌ನಲ್ಲೂ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ನೋಂದಣಿಗೆ ಜೂನ್ 25ರ ಸಂಜೆ 6 ಗಂಟೆಯವರೆಗೆ ಅವಕಾಶವಿದೆ.
ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಹಾಗೂ ಆರೋಗ್ಯವಂತ ಭಾರತದ ಪರಿಕಲ್ಪನೆಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಮ್ಯಾರಥಾನ್‌ನಲ್ಲಿ ಸಾರ್ವಜನಿಕರು, ಯುವಜನರು ಹಾಗೂ ವಿವಿಧ ಸಂಘ–ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!