ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳಿಗೆ ನುಗ್ಗಿ ಮಲಗಿದ್ದ ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರಗಳನ್ನು ಕಸಿದುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಕಳವಾದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತನನ್ನು ಮೊಹಮ್ಮದ್ ಅಬ್ದುಲ್ ಜಾಫರ್ (28), ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಎಂದು ಗುರುತಿಸಲಾಗಿದೆ.ಜೂನ್ 26ರಂದು ಚೊಕ್ಕಬೆಟ್ಟು ಅಜಾದ್ ನಗರದ 2ನೇ ಬ್ಲಾಕ್‌ನ ನಿವಾಸಿ ಜಾಹೀದ್ ಅವರ ಮನೆಯ ಕಿಟಕಿಯ ಮೂಲಕ ಕೈ ಹಾಕಿ, ಅವರು ಮಲಗಿದ್ದ ವೇಳೆ ಕುತ್ತಿಗೆಯಲ್ಲಿದ್ದ ಕರಿಮಣಿ ಸರದ ಭಾಗವನ್ನು (ಅಂದಾಜು ₹20 ಸಾವಿರ ಮೌಲ್ಯ) ಕಸಿದುಕೊಂಡು ಪರಾರಿಯಾಗಿದ್ದ. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದಾದ ಬಳಿಕ ಜೂನ್ 27ರಂದು ಚೊಕ್ಕಬೆಟ್ಟು 8ನೇ ಬ್ಲಾಕ್‌ನಲ್ಲಿ, ಮನೆಯವರು ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿ, ಮಲಗಿದ್ದ ಅಪ್ರೀನಾ ಅವರ ಕುತ್ತಿಗೆಯಲ್ಲಿದ್ದ ಸುಮಾರು ₹1 ಲಕ್ಷ ಮೌಲ್ಯದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದ. ಈ ಸಂಬಂಧವೂ ಸುರತ್ಕಲ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು.ಎರಡೂ ಪ್ರಕರಣಗಳ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಜೂನ್ 29ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್ ಸಮೀಪ ಬಂಧಿಸಿ, ಎರಡೂ ಪ್ರಕರಣಗಳಿಗೆ ಸಂಬಂಧಿಸಿದ ಚಿನ್ನಾಭರಣಗಳನ್ನು ಯಥಾಸ್ಥಿತಿಯಲ್ಲಿ ವಶಪಡಿಸಿಕೊಂಡಿದ್ದಾರೆ.ಪೊಲೀಸರ ಮಾಹಿತಿ ಪ್ರಕಾರ, ಆರೋಪಿಯ ವಿರುದ್ಧ ಈ ಹಿಂದೆಯೂ ಸುರತ್ಕಲ್ ಮತ್ತು ಉರ್ವಾ ಪೊಲೀಸ್ ಠಾಣೆಗಳಲ್ಲಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಪ್ರಕರಣದ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!