ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜುಲೈ 2ರಂದು ಜಿಲ್ಲೆಯ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.ಈ ನಡುವೆಯೂ ಕೆಲವು ಖಾಸಗಿ ಶಾಲೆಗಳು, ಕಾಲೇಜುಗಳು ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳು ತರಗತಿಗಳನ್ನು ನಡೆಸಲಿವೆ ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಯಾವುದೇ ಶೈಕ್ಷಣಿಕ ಸಂಸ್ಥೆ ತರಗತಿಗಳನ್ನು ನಡೆಸಿರುವುದು ಕಂಡುಬಂದರೆ, ಸಂಬಂಧಪಟ್ಟವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ–2005ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತದ ಆದೇಶವನ್ನು ಎಲ್ಲ ಶೈಕ್ಷಣಿಕ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.








