ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಟುಂಬ ಸಮೇತ ಪ್ರಯಾಣಿಸುತ್ತಿದ್ದ ಕಾರು ಚಾಲಕನನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ ಸುಮಾರು ₹23.10 ಲಕ್ಷ ಮೌಲ್ಯದ ಚಿನ್ನಾಭರಣ, ಕಾರು ಹಾಗೂ ಇತರೆ ವಸ್ತುಗಳನ್ನು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಜೂನ್ 29ರಂದು ಬೆಳಗಿನ ಜಾವ ಸುಮಾರು 2.45ಕ್ಕೆ ಮಹಾರಾಷ್ಟ್ರದಿಂದ ಕೇರಳದ ಪಯ್ಯನ್ನೂರಿಗೆ ತೆರಳುತ್ತಿದ್ದ ವಿಕಾಸ್ ಸುಬ್ಬರಾವ್ ಧನವಡೆ ಅವರ ಸ್ವಿಫ್ಟ್ ಡಿಸೈರ್ ಕಾರನ್ನು ಬೈಕಂಪಾಡಿ ಸಮೀಪ ಎರಡು ಇನ್ನೋವಾ ಹಾಗೂ ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ ಮುಸುಕುಧಾರಿಗಳು ಅಡ್ಡಗಟ್ಟಿದ್ದರು. ತಲವಾರು ತೋರಿಸಿ ಬೆದರಿಸಿದ ಅವರು ದೂರುದಾರರ ಮೇಲೆ ಹಲ್ಲೆ ನಡೆಸಿ ಗಾಯಪಡಿಸಿದ್ದು, ಪತ್ನಿ ಮತ್ತು ಮಗನನ್ನು ಬಲವಂತವಾಗಿ ಅಪಹರಿಸಿ ಕೆಲ ಕಿಲೋಮೀಟರ್ ದೂರದಲ್ಲಿ ಬಿಟ್ಟು, ಕಾರಿನಲ್ಲಿದ್ದ ಸುಮಾರು 180 ಗ್ರಾಂ ಚಿನ್ನಾಭರಣ, ಎರಡು ಮೊಬೈಲ್ ಫೋನ್ ಹಾಗೂ ಕಾರು ಸೇರಿ ಒಟ್ಟು ₹23.10 ಲಕ್ಷ ಮೌಲ್ಯದ ಆಸ್ತಿಯನ್ನು ದರೋಡೆ ಮಾಡಿ ಪರಾರಿಯಾಗಿದ್ದರು.ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಜೂನ್ 30ರಂದು ದರೋಡೆಗೊಂಡಿದ್ದ ಸ್ವಿಫ್ಟ್ ಡಿಸೈರ್ ಕಾರು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದ ಗುಡ್ಡ ಪ್ರದೇಶದಲ್ಲಿ ನಂಬರ್ ಪ್ಲೇಟ್ ಇಲ್ಲದ ಸ್ಥಿತಿಯಲ್ಲಿ ಪತ್ತೆಯಾಗಿ ವಶಪಡಿಸಿಕೊಳ್ಳಲಾಗಿದೆ.ಮುಂದಿನ ಕಾರ್ಯಾಚರಣೆಯಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ನಿವಾಸಿ ನಿಮಿಲ್ ಆರ್.ಕೆ. (37), ಕೊಡಗು ಜಿಲ್ಲೆಯ ಇರ್ಷಾದ್ (40) ಹಾಗೂ ಮುಸ್ತಾಫ (49) ಅವರನ್ನು ಬಂಧಿಸಲಾಗಿದೆ. ಇವರಲ್ಲಿ ಇಬ್ಬರು ಆರೋಪಿಗಳಿಗೆ ಆಶ್ರಯ ನೀಡಿದ್ದು, ಮತ್ತೊಬ್ಬ ಪ್ರಮುಖ ಆರೋಪಿಗಳಿಗೆ ಕಾರು ಒದಗಿಸಿ ಕೃತ್ಯಕ್ಕೆ ಸಹಕರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಾಥಮಿಕ ತನಿಖೆಯಲ್ಲಿ ಒಟ್ಟು 16 ಮಂದಿ ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಅವರಲ್ಲಿ 14 ಮಂದಿ ನೇರವಾಗಿ ಡಕಾಯಿತಿಯಲ್ಲಿ ಪಾಲ್ಗೊಂಡಿದ್ದರೆ, ಇಬ್ಬರು ಸಹಕಾರ ನೀಡಿರುವುದು ಗೊತ್ತಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.ಪ್ರಕರಣದ ಪ್ರಮುಖ ಆರೋಪಿಗಳು ಸೇರಿ ಇನ್ನೂ 13 ಮಂದಿ ತಲೆಮರೆಸಿಕೊಂಡಿದ್ದು, ಆರೋಪಿಗಳು ಬಳಸಿದ ನಾಲ್ಕು ಕಾರುಗಳ ಪೈಕಿ ಒಂದು ಇನ್ನೋವಾ ಕ್ರಿಸ್ಟಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಮೂರು ಕಾರುಗಳು, 180 ಗ್ರಾಂ ಚಿನ್ನಾಭರಣ ಹಾಗೂ ಎರಡು ಮೊಬೈಲ್ ಫೋನ್‌ಗಳ ಪತ್ತೆಗೆ ಶೋಧ ಮುಂದುವರಿದಿದೆ.ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ಕೆ. ಹಾಗೂ ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪಣಂಬೂರು ಪೊಲೀಸ್ ಠಾಣೆ ಮತ್ತು ಸಿಸಿಬಿ ತಂಡ ಕಾರ್ಯಾಚರಣೆ ನಡೆಸಿದೆ.







