ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜುಲೈ 8ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ವಸತಿ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಕೆರೆ, ತಗ್ಗು ಪ್ರದೇಶ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದ್ದು, ಮಕ್ಕಳ ಬಗ್ಗೆ ಪಾಲಕರು ವಿಶೇಷ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆಗೆ ಸಜ್ಜಾಗಿರಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಹಾಗೂ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ಸಂಬಂಧಿತ ಇಲಾಖೆಗಳು ಪ್ರತಿ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳುವಂತೆ ಆದೇಶಿಸಲಾಗಿದೆ.ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ತುರ್ತು ಸಹಾಯಕ್ಕಾಗಿ ಟೋಲ್ ಫ್ರೀ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!