ಮಂಗಳೂರು/ಬೆಂಗಳೂರು, ಜು.13: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.ಆಂಧ್ರಪ್ರದೇಶ ಪೊಲೀಸರಿಂದ ಲಭಿಸಿದ ಮಾಹಿತಿಯ ಆಧಾರದಲ್ಲಿ ತಮಿಳುನಾಡು ಮತ್ತು ಕೇರಳದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ.ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ನೌಷಾದ್ (32) ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಅಬ್ದುಲ್ ನಾಸಿರ್ ಪಿ. ಅಲಿಯಾಸ್ ನಾಸಿರ್ (41) ಎಂದು ಗುರುತಿಸಲಾಗಿದೆ.ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಇವರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಎನ್‌ಐಎ ಈಗಾಗಲೇ ಆರೋಪಪಟ್ಟಿ ಸಲ್ಲಿಸಿತ್ತು. ಅಬ್ದುಲ್ ನಾಸಿರ್ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸದಸ್ಯನಾಗಿದ್ದಾನೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.ಎನ್‌ಐಎ ಮಾಹಿತಿ ಪ್ರಕಾರ, ನೌಷಾದ್ ನಕಲಿ ಗುರುತಿನೊಂದಿಗೆ ತಮಿಳುನಾಡಿನ ಹೊಸೂರಿನಲ್ಲಿ ತಲೆಮರೆಸಿಕೊಂಡಿದ್ದನು. ಖಚಿತ ಮಾಹಿತಿಯ ಮೇರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಆತನನ್ನು ಬಂಧಿಸಲಾಗಿದೆ. ಅಬ್ದುಲ್ ನಾಸಿರ್‌ನನ್ನು ಕೇರಳದ ಕೊಚ್ಚಿಯಲ್ಲಿ ವಿಶೇಷ ಕಾರ್ಯಾಚರಣೆಯ ಮೂಲಕ ವಶಕ್ಕೆ ಪಡೆಯಲಾಗಿದೆ.ಈ ಇಬ್ಬರ ವಿರುದ್ಧ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ ಲುಕ್‌ಔಟ್ ಸರ್ಕ್ಯುಲರ್ (ಎಲ್‌ಒಸಿ) ಹಾಗೂ ಬಂಧನ ವಾರಂಟ್ ಹೊರಡಿಸಿತ್ತು. ಇವರ ಪತ್ತೆಗೆ ನೆರವಾಗುವ ಮಾಹಿತಿ ನೀಡಿದವರಿಗೆ ತಲಾ ₹2 ಲಕ್ಷ ಬಹುಮಾನವನ್ನು ಎನ್‌ಐಎ ಘೋಷಿಸಿತ್ತು.ಆರೋಪಿಗಳ ಬಂಧನದ ಹಿಂದೆ ಎನ್‌ಐಎ ನಡೆಸಿದ ದೀರ್ಘಕಾಲದ ಗುಪ್ತಚರ ಕಾರ್ಯಾಚರಣೆ ಪ್ರಮುಖ ಪಾತ್ರ ವಹಿಸಿದೆ ಎಂದು ಮೂಲಗಳು ತಿಳಿಸಿವೆ. ವಿಶೇಷವಾಗಿ ನೌಷಾದ್‌ನ ಚಲನವಲನಗಳ ಕುರಿತು ದೊರೆತ ಮಾಹಿತಿಯ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಎನ್‌ಐಎ ವಿಶೇಷ ತಂಡ ಬೆಳ್ತಂಗಡಿ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಮಾಹಿತಿ ಸಂಗ್ರಹಿಸಿ ಸ್ಥಳೀಯ ಸಂಪರ್ಕಗಳ ಮೇಲೆ ನಿಗಾ ಇಟ್ಟಿತ್ತು ಎಂದು ತಿಳಿದುಬಂದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರು ಗ್ರಾಮದಲ್ಲಿ 2022ರ ಜುಲೈ 26ರಂದು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆಗೈದಿದ್ದರು. ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ಈ ಪ್ರಕರಣದ ತನಿಖೆಯನ್ನು ಬಳಿಕ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿತ್ತು.







