ಪುತ್ತೂರು: ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ತನಿಖೆಯಲ್ಲಿ ಪೊಲೀಸರ ಪಕ್ಷಪಾತ ಹಾಗೂ ನ್ಯಾಯ ನಿರಾಕರಣೆ ನಡೆದಿದೆ ಎಂದು ಆರೋಪಿಸಿ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿ ಯುವತಿಯೊಬ್ಬರು ಸೋಮವಾರ ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.ದೂರಿನಲ್ಲಿ, ಪ್ರಕರಣದ ತನಿಖೆ ನ್ಯಾಯಸಮ್ಮತವಾಗಿ ನಡೆಯುತ್ತಿಲ್ಲ ಎಂಬ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಸಂತ್ರಸ್ತೆಯಾಗಿರುವ ತಮಗೆ ನ್ಯಾಯ ದೊರೆಯುವ ಬದಲು ಆರೋಪಿಯಂತೆ ಪರಿಗಣಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ತನಿಖೆಯಲ್ಲಿ ಸಾರ್ವಜನಿಕ ಅಧಿಕಾರಿಗಳಿಂದ ಪಕ್ಷಪಾತ, ಅಧಿಕಾರ ದುರ್ಬಳಕೆ ಅಥವಾ ಕರ್ತವ್ಯ ಲೋಪ ಕಂಡುಬಂದಿದ್ದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ಮನವಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನಕುಮಾರ್ ಮಾರ್ತ, ಪುತ್ತೂರು ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್ ಚಾಕೋಟೆ ಹಾಗೂ ಸುನೀಲ್ ದಡ್ಡು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಕಾರ್ಯದರ್ಶಿ ಮಣಿಕಂಠ, ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಕೃಷ್ಣಪ್ರಸನ್ನ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳೀಕೃಷ್ಣ ಹಸಂತಡ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!