ಬೆಂಗಳೂರು :ನಾಲ್ಕು ವರ್ಷಗಳ ಹಿಂದೆ ಇಡೀ ಜಗತ್ತನ್ನೇ ನಡುಗಿಸಿದ್ದ ಕೊರೊನಾ ವೈರಸ್ ಇದೀಗ ಮತ್ತೆ ಆತಂಕ ಮೂಡಿಸಿದೆ. ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕೋವಿಡ್ ಭೀತಿ ಎದುರಾಗಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಸೋಂಕಿನ ಪ್ರಕರಣಗಳು ನಿಧಾನವಾಗಿ ಏರಿಕೆಯಾಗುತ್ತಿದ್ದು, ಗಡಿ ಭಾಗಗಳಲ್ಲಿ ಆತಂಕದ ನೆರಳು ಆವರಿಸಿದೆ.ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಎಂಟು ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎನ್ನಲಾಗಿದೆ. ಹೊಸ ರೂಪಾಂತರದ ಶಂಕೆ ಹಿನ್ನೆಲೆಯಲ್ಲಿ ಐವರು ರೋಗಿಗಳ ಮಾದರಿಗಳನ್ನು ಪುಣೆಯ ಎನ್‌ಐವಿ ಲ್ಯಾಬ್‌ಗೆ ಕಳುಹಿಸಲಾಗಿದ್ದು, ವರದಿಗಾಗಿ ಆರೋಗ್ಯ ಇಲಾಖೆ ಕಾಯುತ್ತಿದೆ.ಇತ್ತ ಕರ್ನಾಟಕದಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಜೂನ್ ತಿಂಗಳಲ್ಲಿ ಕೇವಲ 14 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದರೆ, ಜುಲೈನ ಮೊದಲ ಹತ್ತು ದಿನಗಳಲ್ಲೇ ಸೋಂಕಿತರ ಸಂಖ್ಯೆ 32ಕ್ಕೆ ತಲುಪಿದೆ. ಒಟ್ಟು 193 ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 32 ಮಂದಿಗೆ ಸೋಂಕು ದೃಢಪಟ್ಟಿದೆ.ಕೋವಿಡ್ ಆತಂಕದ ಕುರಿತು ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆ ಆಯುಕ್ತ ಗುರುದತ್ತ್ ಹೆಗಡೆ, ಕಡಪಾದಲ್ಲಿ ಸಂಭವಿಸಿರುವ ಸಾವುಗಳು ಶಂಕಿತ ಪ್ರಕರಣಗಳಾಗಿದ್ದು, ಆಂಧ್ರಪ್ರದೇಶ ಸರ್ಕಾರದಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.ರಾಜ್ಯದಲ್ಲಿ ಸದ್ಯ ಪತ್ತೆಯಾಗಿರುವ ಕೋವಿಡ್ ಪ್ರಕರಣಗಳು ಗಂಭೀರ ಸ್ವರೂಪದಲ್ಲಿಲ್ಲ. ಶಸ್ತ್ರಚಿಕಿತ್ಸೆ ವೇಳೆ ಕಡ್ಡಾಯ ಪರೀಕ್ಷೆ ನಡೆಸಿದಾಗ ಲಕ್ಷಣರಹಿತ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿವೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆ ದಿನನಿತ್ಯದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅವರು ಧೈರ್ಯ ತುಂಬಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!