ಬಂಟ್ವಾಳ, ಜು.16: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಜು.14ರಂದು ಬೆಳಿಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಶಶಿಧರ್ ಡಿ.ಎನ್. ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿಬ್ಬಂದಿಗಳೊಂದಿಗೆ ಬಡಗಬೆಳ್ಳೂರು ಗ್ರಾಮದ ತರಾವು ಪ್ರದೇಶದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಮರಳು ತುಂಬಿಕೊಂಡು ಬರುತ್ತಿದ್ದ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಲಾಯಿತು.ವಾಹನ ಚಾಲಕ ಎಸ್. ಮೊಹಮ್ಮದ್ ನೌಫಾಲ್ (26), ಬಡಗಬೆಳ್ಳೂರು ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ವಿಚಾರಣೆಯಲ್ಲಿ ಬಡಗಬೆಳ್ಳೂರು ಗ್ರಾಮದ ಪಲ್ಲಿಪಾಡಿ ನದಿಯಿಂದ ಯಾವುದೇ ಅಧಿಕೃತ ಪರವಾನಗಿ ಪಡೆಯದೇ ಹಾಗೂ ಸರ್ಕಾರಕ್ಕೆ ರಾಜಸ್ವ ಪಾವತಿಸದೇ ಅಕ್ರಮವಾಗಿ ಮರಳು ಕಳವು ಮಾಡಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.ಪೊಲೀಸರು ಪಿಕಪ್ ವಾಹನವನ್ನು ವಶಕ್ಕೆ ಪಡೆದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 107/2026ರಡಿ ಕರ್ನಾಟಕ ಮೈನರ್ ಮಿನರಲ್ ಕನ್ಸೆಷನ್ ರೂಲ್ಸ್-1994, ಎಂಎಂಆರ್‌ಡಿ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)-2023ರ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.







