ಮಂಗಳೂರು: ಮಂಗಳೂರು ನಗರ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 5 ಕೋಟಿ 20 ಲಕ್ಷ ರೂ. ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದು, ಬೆಳ್ತಂಗಡಿ ಮೂಲದ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧಿಸಿದ್ದಾರೆ.ಬಂಧಿತರು ಇಂಡಬೆಟ್ಟು ಗ್ರಾಮದ ಮೊಹಮ್ಮದ್ ಅಲ್ಪಾಜ್ (28) ಹಾಗೂ ಉಜಿರೆಯ ಲಾಯಿಲ ಗ್ರಾಮದ ಮೊಹಮ್ಮದ್ ಮುಸ್ತಾಫಾ (28) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಎಂಡಿಎಂಎ, ಬ್ಯಾಗ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಳಾಯಿಗುಡ್ಡೆಯಲ್ಲಿ ಜೂನ್ 25ರಂದು 15.17 ಗ್ರಾಂ ಎಂಡಿಎಂಎ ಸಹಿತ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನ ಬಂಧನದ ಬಳಿಕ ನಡೆದ ತನಿಖೆಯಲ್ಲಿ ಈ ಜಾಲದ ಸುಳಿವು ಸಿಕ್ಕಿತ್ತು. ತನಿಖೆ ಮುಂದುವರಿಸಿದ ಸಿಸಿಬಿ ತಂಡಕ್ಕೆ ದೆಹಲಿಯಿಂದ ಮಾದಕ ವಸ್ತು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜುಲೈ 15ರಂದು ಹುನಗುಂದದ ರಾಷ್ಟ್ರೀಯ ಹೆದ್ದಾರಿಯ ರಾಯಲ್ ಇನ್ ಲಾಡ್ಜ್ ಬಳಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಯಿತು.ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕಾರಿನ ಮೂಲಕ ದೆಹಲಿಯಿಂದ ಎಂಡಿಎಂಎ ತಂದು ಬೆಂಗಳೂರನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ವಿವಿಧ ಭಾಗಗಳಿಗೆ ಪೂರೈಕೆ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರಿದಿದೆ.ಆರೋಪಿ ಮೊಹಮ್ಮದ್ ಅಲ್ಪಾಜ್ ವಿರುದ್ಧ ಈ ಹಿಂದೆ ಕೊಣಾಜೆ ಹಾಗೂ ಉರ್ವ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!