ಬಂಟ್ವಾಳ, ಜು.16: ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.ಸಂಜೆ ಸುಮಾರು 6 ಗಂಟೆ ವೇಳೆಗೆ ಬಸ್‌ಗಾಗಿ ಕಾಯುತ್ತಿದ್ದ 21–25 ವರ್ಷದ ಯುವತಿಯ ಮೇಲೆ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ. ಗಾಯಗೊಂಡಿದ್ದ ಯುವತಿಯನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಚಿಕಿತ್ಸೆ ವೇಳೆ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದಾನೆ ಎನ್ನಲಾಗಿದೆ. ಯುವತಿಯನ್ನು ಆತ ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲು ತನಿಖೆಯನ್ನು ತೀವ್ರಗೊಳಿಸಲಾಗಿದೆ.ಪೊಲೀಸರು ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.







