ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜುಲೈ 18, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.ಇದರೊಂದಿಗೆ, ಮಕ್ಕಳು ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿತೀರ ಹಾಗೂ ಸಮುದ್ರತೀರಗಳಿಗೆ ತೆರಳದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿತೀರ ಹಾಗೂ ಸಮುದ್ರತೀರಗಳಿಗೆ ಭೇಟಿ ನೀಡದಂತೆ ಜಿಲ್ಲಾಡಳಿತ ಮನವಿ ಮಾಡಿದೆ.ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ವಿಪತ್ತು ನಿರ್ವಹಣಾ ಕಾರ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಿ, ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ನಿರ್ದೇಶನ ನೀಡಲಾಗಿದೆ.ಪ್ರಾಕೃತಿಕ ವಿಕೋಪ ಸಂಬಂಧಿಸಿದ ತುರ್ತು ನೆರವಿಗಾಗಿ ಸಾರ್ವಜನಿಕರು ಟೋಲ್ ಫ್ರೀ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!