ಮಂಗಳೂರು, ಜು.22: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವುದರಿಂದ ಜಿಲ್ಲೆಯಾದ್ಯಂತ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜುಲೈ 23ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು (12ನೇ ತರಗತಿವರೆಗೆ) ರಜೆ ಘೋಷಿಸಿ ಆದೇಶಿಸಿದ್ದಾರೆ.ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.ಪೋಷಕರು ಮಕ್ಕಳನ್ನು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ಹೋಗದಂತೆ ಎಚ್ಚರ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ.ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ವಿಪತ್ತು ನಿರ್ವಹಣಾ ಕಾರ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ತುರ್ತು ನೆರವಿಗಾಗಿ ಜಿಲ್ಲಾಡಳಿತದ ಟೋಲ್ ಫ್ರೀ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಲು ಸಾರ್ವಜನಿಕರಿಗೆ ತಿಳಿಸಲಾಗಿದೆ.









