ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ಭಾಗದಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದರು.ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಅವರು ಮಂಗಳವಾರ ಸಂಜೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರು ಹಾಗೂ ವಾಹನ ಸವಾರರಿಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಅವರು, ಸಂಬಂಧಿತ ಅಧಿಕಾರಿಗಳು ಮತ್ತು ಗುತ್ತಿಗೆದಾರ ವಿಜಯಾನಂದ ಶೆಟ್ಟಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.ಕಾಂಕ್ರೀಟ್ ರಸ್ತೆಯ ಎರಡೂ ಬದಿಗಳಿಗೆ ತಕ್ಷಣ ಮಣ್ಣು ಹಾಕಿ ವಾಹನ ಸಂಚಾರಕ್ಕೆ ಸುರಕ್ಷಿತ ವ್ಯವಸ್ಥೆ ಕಲ್ಪಿಸುವಂತೆ ಅವರು ಸೂಚಿಸಿದರು. ರಸ್ತೆ ನಿರ್ಮಾಣ ಪೂರ್ಣಗೊಂಡ ಬಳಿಕವೂ ಡ್ರೈನೇಜ್ ಕಾಮಗಾರಿ, ಕೇಬಲ್ ಅಳವಡಿಕೆ ಸೇರಿದಂತೆ ಇತರ ಕೆಲಸಗಳ ನೆಪದಲ್ಲಿ ಕಾಮಗಾರಿ ವಿಳಂಬವಾಗುತ್ತಿರುವುದರಿಂದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟಾಗಿದೆ ಎಂದು ಹೇಳಿದರು.ಈ ಕುರಿತು ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿದ್ದು, ಬುಧವಾರದಿಂದ ರಸ್ತೆ ಬದಿಗಳಿಗೆ ಮಣ್ಣು ಹಾಕುವ ಕಾಮಗಾರಿ ಆರಂಭಿಸಿ, ಅಗತ್ಯವಿದ್ದರೆ ರಾತ್ರಿ ವೇಳೆಯಲ್ಲಿಯೂ ಕೆಲಸ ನಡೆಸಿ ಶೀಘ್ರ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಪುತ್ತಿಲ ತಿಳಿಸಿದರು.ಸ್ಥಳೀಯ ಶಾಸಕರು ಆರಂಭದಿಂದಲೇ ಕಾಮಗಾರಿಯ ಪ್ರಗತಿಯ ಮೇಲೆ ಹೆಚ್ಚಿನ ಗಮನಹರಿಸಿ, ಅಧಿಕಾರಿಗಳ ಮೂಲಕ ವೇಗವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕಾಗಿತ್ತು. ಯೋಜನೆಯ ಅನುಷ್ಠಾನ ಸಮರ್ಪಕವಾಗಿದ್ದರೆ ಸಾರ್ವಜನಿಕರಿಗೆ ಇಷ್ಟೊಂದು ತೊಂದರೆ ಉಂಟಾಗುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.









