ಮಂಗಳೂರು, ಜು.24: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.25 (ಶನಿವಾರ)ರಂದು ಜಿಲ್ಲೆಯ ಕೆಲವು ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ರಜೆ ಘೋಷಿಸಿದ್ದಾರೆ.ರಜೆ ಘೋಷಿಸಲಾದ ಸಂಸ್ಥೆಗಳು:ಜಿಲ್ಲೆಯ ಎಲ್ಲಾ ಅಂಗನವಾಡಿಗಳುಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ವಸತಿ ಶಾಲೆಗಳು ಸೇರಿದಂತೆ)ಎಲ್ಲಾ ಪದವಿ ಪೂರ್ವ ಕಾಲೇಜುಗಳ 12ನೇ ತರಗತಿ (ವಸತಿ ಕಾಲೇಜುಗಳು ಸೇರಿದಂತೆ)ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು (ವಸತಿ ಕಾಲೇಜುಗಳು ಸೇರಿದಂತೆ)ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.ಜಿಲ್ಲಾಡಳಿತವು ಸಾರ್ವಜನಿಕರಿಗೆ ಹಲವು ಮುನ್ನೆಚ್ಚರಿಕೆ ಸೂಚನೆಗಳನ್ನೂ ನೀಡಿದ್ದು, ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರು ನದಿತೀರ, ಸಮುದ್ರತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ.ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿರಬೇಕು ಎಂದು ನಿರ್ದೇಶನ ನೀಡಲಾಗಿದೆ. ಪ್ರಾಕೃತಿಕ ವಿಕೋಪ ಸಂಬಂಧಿತ ತುರ್ತು ನೆರವಿಗಾಗಿ ಟೋಲ್ ಫ್ರೀ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಲು ಜಿಲ್ಲಾಡಳಿತ ತಿಳಿಸಿದೆ.









