ಮಂಗಳೂರು: ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ಸಂತ್ರಸ್ತರ ಜೀವ ಉಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ರಾಹತ್’ (ರಸ್ತೆ ಅಪಘಾತ ಸಂತ್ರಸ್ತರ ಆಸ್ಪತ್ರೆಗೆ ದಾಖಲು ಮತ್ತು ಖಚಿತ ಚಿಕಿತ್ಸೆ) ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಸದ ಬ್ರಿಜೇಶ್ ಚೌಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶನಿವಾರ ಯೋಜನೆಯ ಅನುಷ್ಠಾನ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆ ಅಪಘಾತ ಸಂತ್ರಸ್ತರನ್ನು ತುರ್ತು ಸಂದರ್ಭಗಳಲ್ಲಿ ದಾಖಲಿಸದೆ ನಿರ್ಲಕ್ಷ್ಯ ತೋರುವ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಯೋಜನೆಯಡಿ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಯಾವುದೇ ದಾಖಲೆಗಳ ತೊಡಕಿಲ್ಲದೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಏಳು ದಿನಗಳವರೆಗೆ ಗರಿಷ್ಠ ₹1.50 ಲಕ್ಷದವರೆಗೆ ಉಚಿತ ತುರ್ತು ಚಿಕಿತ್ಸೆ ನೀಡಲಾಗುತ್ತದೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ ನಂತರ 24 ಗಂಟೆಗಳೊಳಗೆ, ವಿಷಮ ಪರಿಸ್ಥಿತಿಯಲ್ಲಿ ಗರಿಷ್ಠ 48 ಗಂಟೆಗಳೊಳಗೆ, ಇ-ಧಾರ್ ಪೋರ್ಟಲ್ನಲ್ಲಿ ಮಾಹಿತಿ ದಾಖಲಿಸಬೇಕು. ಬಳಿಕ ಪೊಲೀಸ್ ಇಲಾಖೆ ಮಾಹಿತಿ ಪರಿಶೀಲಿಸಿ ಅನುಮೋದಿಸಿದ ತಕ್ಷಣ ಅದು ಟಿಎಂಎಸ್ ಪೋರ್ಟಲ್ಗೆ ರವಾನೆಯಾಗಲಿದ್ದು, ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.ನಿಗದಿತ ಅವಧಿಯಲ್ಲಿ ಮಾಹಿತಿ ದಾಖಲಿಸದಿದ್ದರೆ ಅರ್ಹ ಸಂತ್ರಸ್ತರು ಉಚಿತ ಚಿಕಿತ್ಸೆಯ ಸೌಲಭ್ಯದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ, ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಂಸದರು ತಿಳಿಸಿದರು.ಜಿಲ್ಲೆಯ ಪ್ರಮುಖ ಆಸ್ಪತ್ರೆಗಳ ಜತೆಗೆ ತಾಲೂಕು ಮಟ್ಟದಲ್ಲಿಯೂ ಸಭೆಗಳನ್ನು ನಡೆಸಿ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಅವರು ಸೂಚಿಸಿದರು.ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್. ತಿಮ್ಮಯ್ಯ, ಡಿಸಿಪಿ ರವಿಶಂಕರ್, ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲೆಯ ಪ್ರಮುಖ ಆಸ್ಪತ್ರೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.









