ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆಗಳಲ್ಲಿರುವ ಹೊಂಡಗಳನ್ನು ಮುಚ್ಚುವುದು ಹಾಗೂ ದುರಸ್ತಿ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ ನರ್ವಾಡೆ ಅವರಿಗೆ ನಿರ್ದೇಶನ ನೀಡಿದ್ದಾರೆ. ಅದರಂತೆ ಕ್ಷೇತ್ರದ ಎಲ್ಲಾ ಗ್ರಾಪಂ ವ್ಯಾಪ್ತಿಯ ರಸ್ತೆಗಳಲ್ಲಿ ಏಕಕಾಲದಲ್ಲಿ ದುರಸ್ತಿ ಕಾರ್ಯ ಆರಂಭವಾಗಲಿದೆ.ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕ್ಷೇತ್ರದ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡಗಳು ಉಂಟಾಗಿದ್ದು, ಅನೇಕ ಕಡೆಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆನೀರು ರಸ್ತೆಯಲ್ಲೇ ಹರಿದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇದರಿಂದ ಅಪಘಾತ ಸಂಭವಿಸುವ ಆತಂಕವೂ ಹೆಚ್ಚಾಗಿದ್ದು, ಗ್ರಾಮೀಣ ಭಾಗದ ಸಾರ್ವಜನಿಕರು ಈ ಕುರಿತು ಶಾಸಕರ ಗಮನಕ್ಕೆ ತಂದಿದ್ದರು.ಒಂದೇ ದಿನ 73 ಮನವಿಗಳುಬುಧವಾರ ಒಂದೇ ದಿನ ಶಾಸಕರ ಪುತ್ತೂರು ಕಚೇರಿಗೆ ರಸ್ತೆ ದುರಸ್ತಿ ಸಂಬಂಧ 73 ಮನವಿಗಳು ಸಲ್ಲಿಕೆಯಾಗಿವೆ. ಗ್ರಾಪಂ ವ್ಯಾಪ್ತಿಯ ರಸ್ತೆಗಳಲ್ಲಿನ ಹೊಂಡಗಳು ಹಾಗೂ ಚರಂಡಿ ಕೊರತೆಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.ಮನವಿಗಳಿಗೆ ತಕ್ಷಣ ಸ್ಪಂದಿಸಿದ ಶಾಸಕ ಅಶೋಕ್ ರೈ ಅವರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಎಲ್ಲಾ ಗ್ರಾಪಂ ರಸ್ತೆಗಳ ಪರಿಶೀಲನೆ ನಡೆಸಿ, ಹೊಂಡ ಬಿದ್ದಿರುವ ರಸ್ತೆಗಳನ್ನು ತುರ್ತಾಗಿ ದುರಸ್ತಿ ಮಾಡಬೇಕು ಹಾಗೂ ಅಗತ್ಯವಿರುವ ಕಡೆಗಳಲ್ಲಿ ಚರಂಡಿ ನಿರ್ಮಿಸಿ ಮಳೆನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಈ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಅನುದಾನ ಬಳಸುವಂತೆ ಹಾಗೂ ಅನುದಾನದ ಕೊರತೆಯಿದ್ದರೆ ಕೂಡಲೇ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದ್ದಾರೆ.ಮಳೆಗಾಲದಲ್ಲೇ ದುರಸ್ತಿ ಕಾರ್ಯಸಾಮಾನ್ಯವಾಗಿ ಮಳೆಗಾಲ ಮುಗಿದ ಬಳಿಕ ರಸ್ತೆ ದುರಸ್ತಿ ಕಾರ್ಯ ನಡೆಯುವುದು ರೂಢಿ. ಆದರೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಳೆಗಾಲದಲ್ಲೇ ಗ್ರಾಪಂ ವ್ಯಾಪ್ತಿಯ ರಸ್ತೆಗಳನ್ನು ಏಕಕಾಲದಲ್ಲಿ ದುರಸ್ತಿ ಮಾಡುವ ಕಾರ್ಯ ಆರಂಭವಾಗುತ್ತಿರುವುದು ವಿಶೇಷವಾಗಿದೆ. ಇದರಿಂದ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಸಂಚಾರದ ಸಮಸ್ಯೆ ನಿವಾರಣೆಯಾಗುವ ನಿರೀಕ್ಷೆಯಿದೆ.ಶಾಸಕರ ಮಾತು”ವಿಪರೀತ ಮಳೆಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ರಸ್ತೆಗಳು ಹೊಂಡಗಳಿಂದ ಹದಗೆಟ್ಟಿದ್ದು, ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆನೀರು ರಸ್ತೆಯಲ್ಲೇ ಹರಿಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಒಂದೇ ದಿನ 73 ಮಂದಿ ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ. ಅವರ ಮನವಿಗೆ ಸ್ಪಂದಿಸಿ ತಕ್ಷಣ ರಸ್ತೆ ದುರಸ್ತಿ ಹಾಗೂ ಅಗತ್ಯ ಚರಂಡಿ ಕಾಮಗಾರಿ ಕೈಗೊಳ್ಳುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ. ಮಳೆಗಾಲದ ಬಳಿಕ ಶಾಶ್ವತ ಡಾಮರೀಕರಣ ಕಾಮಗಾರಿಯನ್ನೂ ಕೈಗೊಳ್ಳಲಾಗುವುದು. ಅನುದಾನದ ಕೊರತೆಯಿದ್ದರೆ ತಕ್ಷಣ ತಿಳಿಸುವಂತೆಯೂ ಸೂಚಿಸಲಾಗಿದೆ. ನನ್ನ ಕ್ಷೇತ್ರದ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ.”– ಅಶೋಕ್ ರೈ, ಶಾಸಕರು, ಪುತ್ತೂರು ವಿಧಾನಸಭಾ ಕ್ಷೇತ್ರ









