ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಹತ್ವದ ಆದೇಶ ಹೊರಡಿಸಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಸ್ಟ್ 1, 2026ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ವಸತಿ ಶಾಲೆಗಳು ಸೇರಿ), 12ನೇ ತರಗತಿವರೆಗಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳು (ವಸತಿ ಕಾಲೇಜುಗಳು ಸೇರಿ), ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (ವಸತಿ ಕಾಲೇಜುಗಳು ಸೇರಿ) ರಜೆ ಘೋಷಿಸಿದ್ದಾರೆ.ಜೊತೆಗೆ, ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿತೀರ ಹಾಗೂ ಸಮುದ್ರ ತೀರಗಳಿಗೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಮನವಿ ಮಾಡಲಾಗಿದೆ.ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ತುರ್ತು ಪರಿಸ್ಥಿತಿಗಳಿಗೆ ಪ್ರತಿಯೊಂದು ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವಂತೆ ಸಂಬಂಧಿತ ಇಲಾಖೆಗೆ ನಿರ್ದೇಶಿಸಲಾಗಿದೆ.ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ತುರ್ತು ನೆರವಿಗಾಗಿ ಸಾರ್ವಜನಿಕರು ಟೋಲ್ ಫ್ರೀ 1077 ಅಥವಾ 0824-2442590 ಸಂಖ್ಯೆಯನ್ನು ಸಂಪರ್ಕಿಸಬಹುದು.









