ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಬೆಳ್ತಂಗಡಿ ವಲಯದ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪದ ಮೇರೆಗೆ ಮಹಮ್ಮದ್ ರಿಯಾಜ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 153(ಎ) ಹಾಗೂ 295(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಅಂದಿನ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರವಿ ಬಿ.ಎಸ್. ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಐಪಿಸಿ ಕಲಂ 153(ಎ) ಅಡಿಯಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಆಶೀತಾ ವಾದ ಮಂಡಿಸಿದ್ದರು.










