ಪುತ್ತೂರು: ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲೇ ಮಹತ್ವದ ಮೈಲಿಗಲ್ಲಾಗಿದ್ದು, ಇದರಿಂದ ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ವ್ಯಾಪಕ ಬೆಳವಣಿಗೆಗೆ ದಾರಿ ತೆರೆದುಕೊಳ್ಳಲಿದೆ ಎಂದು ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಡಿಕಲ್ ಕಾಲೇಜು ಸ್ಥಾಪನೆಯಿಂದ ಆರೋಗ್ಯ ಸೇವೆಗಳ ಗುಣಮಟ್ಟ ಹೆಚ್ಚುವುದರ ಜೊತೆಗೆ ವೈದ್ಯಕೀಯ ಶಿಕ್ಷಣದ ಅವಕಾಶಗಳು ವಿಸ್ತರಿಸಲಿದ್ದು, ಸಾವಿರಾರು ವಿದ್ಯಾರ್ಥಿಗಳು, ವೈದ್ಯರು ಹಾಗೂ ಸಿಬ್ಬಂದಿಯ ಆಗಮನದಿಂದ ವ್ಯಾಪಾರ, ವಾಣಿಜ್ಯ, ಸಾರಿಗೆ, ವಸತಿ ಮತ್ತು ಹೋಟೆಲ್ ಉದ್ಯಮಕ್ಕೂ ಉತ್ತೇಜನ ದೊರೆಯಲಿದೆ ಎಂದರು.ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಶಾಸಕ ಅಶೋಕ್ ಕುಮಾರ್ ರೈ ಅವರು ಸರ್ಕಾರಿ ಮೆಡಿಕಲ್ ಕಾಲೇಜನ್ನು ಪುತ್ತೂರಿಗೆ ತರುವಲ್ಲಿ ನಿರಂತರ ಪ್ರಯತ್ನ ನಡೆಸಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಕೈಗೊಂಡ ಪ್ರಯತ್ನಗಳ ಫಲವಾಗಿ ಯೋಜನೆ ಸಾಕಾರಗೊಂಡಿದೆ ಎಂದು ಶ್ಲಾಘಿಸಿದರು.ಮಣಿಪಾಲ, ಸುಳ್ಯ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಮೂಲಕ ಅಭಿವೃದ್ಧಿ ಕಂಡ ಪ್ರದೇಶಗಳ ಮಾದರಿಯಲ್ಲಿ ಪುತ್ತೂರೂ ಬೆಳೆಯುವ ಅವಕಾಶ ಪಡೆದಿದ್ದು, ಮೆಡಿಕಲ್ ಕಾಲೇಜಿನ ಲಾಭವು ನಗರಕ್ಕೆ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳಿಗೂ ದೊರೆಯಲಿದೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಅನ್ವರ್ ಖಾಸಿಂ, ಲ್ಯಾನ್ಸಿ ಮಸ್ಕರೇನಸ್, ಗಂಗಾಧರ್, ಸುಪ್ರಿತ್ ಕಣ್ಣರಾಯ ಹಾಗೂ ರವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.










