ಪುತ್ತೂರು, ಆ.7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 8 (ಶನಿವಾರ) ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹೊರಡಿಸಿರುವ ಆದೇಶದಂತೆ, ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು (12ನೇ ತರಗತಿ ಸೇರಿದಂತೆ, ಎಲ್ಲಾ ವಸತಿ ಶಾಲೆ-ಕಾಲೇಜುಗಳೂ ಸೇರಿ) ಆಗಸ್ಟ್ 8ರಂದು ಕಾರ್ಯನಿರ್ವಹಿಸುವುದಿಲ್ಲ.ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಇದರೊಂದಿಗೆ, ಮಕ್ಕಳು ನೀರು ತುಂಬಿರುವ ತಗ್ಗು ಪ್ರದೇಶ, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ತಿಳಿಸಲಾಗಿದೆ.ಯಾವುದೇ ಪ್ರಕೃತಿ ವಿಕೋಪ ಸಂಬಂಧಿತ ತುರ್ತು ಪರಿಸ್ಥಿತಿಯಲ್ಲಿ ಟೋಲ್ ಫ್ರೀ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.










