ವಿಟ್ಲ: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲಪಡೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಮಂಗಳವಾರ ನಡೆದಿದೆ.ಖಾಸಗಿ ಶಾಲೆಗೆ ಸೇರಿದ ಬಸ್ 15ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದಾಗ ಕುಂಟುಕುಡೇಲು ಬಳಿ ಇಳಿಜಾರು ರಸ್ತೆಯಲ್ಲಿ ದಿಢೀರ್ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬಿಟ್ಟು ಕೆಳಗಿಳಿದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಸ್ಸಿನ ಮೇಲೆಯೇ ಬಿದ್ದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲ ಮಕ್ಕಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಬಸ್ಸಿನ ಮುಂಭಾಗ ಹಾನಿಗೊಂಡಿದೆ.ಘಟನೆ ಬಳಿಕ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ಸುರಕ್ಷಿತವಾಗಿ ಬಸ್ಸಿನಿಂದ ಹೊರಕ್ಕೆ ಕರೆತಂದಿದ್ದಾರೆ.










