ವೇಣೂರು: ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ.ಆ.9ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಅಕ್ಷಯ ಡವಗಿ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬೆಳ್ತಂಗಡಿ–ವೇಣೂರು ಮೇಲಿನ ಪೇಟೆ ಎಂಬಲ್ಲಿ ವ್ಯಕ್ತಿಯೊಬ್ಬ ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿರುವುದು ಕಂಡುಬಂದಿತ್ತು.ವಿಚಾರಣೆ ನಡೆಸಿದಾಗ ಆತ ಬೆಳ್ತಂಗಡಿ ಕುಕ್ಕೇಡಿ ನಿವಾಸಿ ಮಹಮ್ಮದ್ ಆಸಿಫ್ (35) ಎಂದು ತಿಳಿದುಬಂದಿದೆ. ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ದೃಢಪಟ್ಟಿದೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 54/2026ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(b) ಮತ್ತು 22(a) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.










