ಪುತ್ತೂರು: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಪ್ರಮುಖ ಪಾತ್ರ ವಹಿಸುತ್ತದೆ. ಎನ್‌ಎಸ್‌ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ ಎಂದು ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಹರಿಪ್ರಸಾದ್ ಎಸ್. ಹೇಳಿದರು.ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಸಮಾಜಸೇವೆಯ ಮಹತ್ವ ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕವಾಗಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲೇ ಸೇವಾ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.ಕಾರ್ಯಕ್ರಮದ ಆರಂಭದಲ್ಲಿ ಎನ್‌ಎಸ್‌ಎಸ್ ಅಧಿಕಾರಿ ಡಾ. ಕೆ. ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುಷ್ಪ ಎನ್. ಸ್ವಾಗತಿಸಿದರು. ಘಟಕ ನಾಯಕ ಸಾಯಿ ಪ್ರತೀಶ್ ಮುಖ್ಯ ಅತಿಥಿಯನ್ನು ಪರಿಚಯಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ. ಆಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲೇ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ವೇದಿಕೆಯಲ್ಲಿ ಘಟಕ ನಾಯಕ ಬೃಂದನ್ ಹಾಗೂ ಎನ್‌ಎಸ್‌ಎಸ್ ಕಾರ್ಯದರ್ಶಿ ಕಾರ್ತಿಕ್ ಉಪಸ್ಥಿತರಿದ್ದರು. ಘಟಕ ನಾಯಕಿ ಸ್ಪಂದನಾ ಕಾರ್ಯಕ್ರಮ ನಿರೂಪಿಸಿದರು. ಶಿಲ್ಪಾ ವಂದಿಸಿದರು.ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.










