ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹಾಸನ ಕಡೆಗೆ ತೆರಳುತ್ತಿದ್ದ ವ್ಯಕ್ತಿಯ ಕಾರನ್ನು ತಡೆದು, ಆತನಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ ಆರೋಪದಡಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ನೀಡಿದ ದೂರಿನಂತೆ, ಆ.11ರಂದು ರಾತ್ರಿ ಕೆಲಸದ ನಿಮಿತ್ತ ಪರಿಚಯಸ್ಥರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನ ಕಡೆಗೆ ತೆರಳುತ್ತಿದ್ದರು. ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೊಕ್ಕಡ ಕಾಪಿನಬಾಗಿಲು ಬಳಿ ತಲುಪಿದಾಗ, ಕೆಲವರು ಗುಂಪಾಗಿ ಸೇರಿ ಕಾರನ್ನು ತಡೆದು ನಿಲ್ಲಿಸಿ, ಕಾರಿನಲ್ಲಿದ್ದ ಬಾಲಕಿಯ ಬಗ್ಗೆ ವಿಚಾರಿಸಿ, ಶೈಕ್ ಮುಕ್ತಾರ್ ಅವರಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 106/2026ರಂತೆ BNSನ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಧನುಷ್ (23), ದಿನೇಶ್ (45), ಪೂರ್ಣಕ್ಷ ಬಿ. (40), ಸೂರಜ್ (25) ಹಾಗೂ ರಂಜಿತ್ ಬಂಡಾರಿ (29) ಎಂಬ ಐವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಪ್ರತಿದೂರು ದಾಖಲುಇದೇ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಾಯಿ ಕೂಡ ದೂರು ನೀಡಿದ್ದು, ಶೈಕ್ ಮುಕ್ತಾರ್ (52) ಎಂಬಾತ ತನ್ನ ಮಗಳನ್ನು ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿಕೊಂಡು ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಿದ್ದಾರೆ.ಈ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ Zero FIR 03/2026 ದಾಖಲಿಸಿ, BNS ಕಲಂ 137(2)ರಂತೆ ಪ್ರಕರಣ ದಾಖಲಿಸಲಾಗಿದೆ.










