ಪುತ್ತೂರು: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ಶುಕ್ರವಾರ ದಿಢೀರ್ ದಾಳಿ ನಡೆಸಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಯಾಗಿದೆ.
ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕಳೆದ ಒಂದು ಗಂಟೆಯಿಂದ ನಗರಸಭೆಯ ವಿವಿಧ ದಾಖಲೆ ಪತ್ರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ನಗರಸಭಾ ಮುಖ್ಯಾಧಿಕಾರಿ ವಿದ್ಯಾ ಕಾಳೆ ಸೇರಿದಂತೆ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕಚೇರಿಯೊಳಗೇ ಇರಿಸಿಕೊಂಡು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೊಬೈಲ್ ಫೋನ್‌ಗಳನ್ನು ಪಡೆದುಕೊಂಡು ಪರಿಶೀಲನೆ ನಡೆಸಲಾಗಿದೆ.
ದಾಳಿಯ ವೇಳೆ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಕಚೇರಿಯಿಂದ ಹೊರಗೆ ತೆರಳಲು ಅವಕಾಶ ನೀಡಿಲ್ಲ ಎನ್ನಲಾಗಿದೆ. ಸಾರ್ವಜನಿಕ ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಕಡತಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ದಾಳಿಯ ಸಂಪೂರ್ಣ ವಿವರಗಳು ಲೋಕಾಯುಕ್ತರ ಪರಿಶೀಲನೆ ಪೂರ್ಣಗೊಂಡ ಬಳಿಕ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!