ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದಗುಡ್ಡೆಯಲ್ಲಿ 82 ವರ್ಷದ ವೃದ್ಧೆಯ ಕೈಯಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಮೊಮ್ಮಗನನ್ನೇ ಪೊಲೀಸರು ಬಂಧಿಸಿದ್ದಾರೆ.ಆ.14ರಂದು ಅವ್ವಮ್ಮ (82) ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದ ಅಪರಿಚಿತ ವ್ಯಕ್ತಿಯೊಬ್ಬರು ಅವರ ಎರಡು ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ, 5 ಲಕ್ಷ ರೂ. ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ. ಈ ವೇಳೆ ಅವ್ವಮ್ಮ ಅವರ ಕೈಗೆ ರಕ್ತಗಾಯವಾಗಿತ್ತು. ಈ ಕುರಿತು ಅವರ ಪುತ್ರ ಸಾದಿಕ್ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ತನಿಖೆ ನಡೆಸಿದ ಪೊಲೀಸರು ಆ.16ರಂದು ಪ್ರಕರಣದ ಆರೋಪಿಯಾಗಿರುವ ತೆಂಕಕಜೇಕಾರು ನಿವಾಸಿ ಹಾಗೂ ಅವ್ವಮ್ಮ ಅವರ ಮೊಮ್ಮಗ ಶಬೀರ್ (33)ನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಎರಡು ಚಿನ್ನದ ಬಳೆಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತನನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಬೆಳ್ತಂಗಡಿ ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿಪಿಐ ರವಿ ಬಿ.ಎಸ್., ಪುಂಜಾಲಕಟ್ಟೆ ಠಾಣೆ ಪಿಎಸ್‌ಐ ರಾಜೇಶ್ ಕೆ.ವಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಸಹಕರಿಸಿದ್ದಾರೆ.











