ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಪುತ್ತೂರು ನಗರ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿ, ಮೂರು ಜಾನುವಾರುಗಳನ್ನು ಹಾಗೂ ಪಿಕ್‌ಅಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.ಆ.23ರಂದು ಬೆಳಿಗ್ಗೆ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ. ಅವರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸಿಬ್ಬಂದಿಯೊಂದಿಗೆ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ KA 19 D 0948 ನೋಂದಣಿಯ ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ.ಈ ವೇಳೆ ವಾಹನದಲ್ಲಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡುಬಂದಿದೆ. ವಾಹನ ಚಾಲಕ ಮಹಮ್ಮದ್ ಜಬ್ಬಾರ್‌ನನ್ನು ವಿಚಾರಿಸಿದಾಗ, ಶಾಂತಿಗೋಡು ಗ್ರಾಮದ ನಿವಾಸಿ ಅಶೋಕ್ ಎಂಬವರಿಂದ ಜಾನುವಾರುಗಳನ್ನು ಖರೀದಿಸಿ, ಯಾವುದೇ ಪರವಾನಿಗೆ ಇಲ್ಲದೆ ವಧೆ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಜಾನುವಾರುಗಳ ಸಹಿತ ವಾಹನ ಹಾಗೂ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ. 101/2026ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಾಣಿ ಹಿಂಸಾ ಕಾಯ್ದೆಯ ಕಲಂ 11(D), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 4, 5, 12 ಹಾಗೂ IMV ಕಾಯ್ದೆಯ ಕಲಂ 66 ಜೊತೆಗೆ 192(A)ರಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!