ಪುತ್ತೂರು: ಪುತ್ತೂರು–ಕಾಣಿಯೂರು ರಸ್ತೆಯ ಮುಕ್ವೆ ಸಮೀಪ ರಸ್ತೆ ಸಂಪೂರ್ಣ ಹೊಂಡ-ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.ಕಳೆದ ಹಲವು ದಿನಗಳಿಂದ ರಸ್ತೆಯಲ್ಲಿ ಬೃಹತ್ ಹೊಂಡಗಳು ಕಾಣಿಸಿಕೊಂಡಿದ್ದರೂ, ಇದುವರೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಮುಂದಾಗಿಲ್ಲ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.ಪ್ರಮುಖ ರಸ್ತೆಯಾಗಿರುವ ಇಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿದ್ದು, ಹೊಂಡಗಳಿಂದಾಗಿ ವಾಹನ ಸವಾರರು ಅಪಾಯ ಎದುರಿಸುವಂತಾಗಿದೆ. ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ರಾತ್ರಿ ವೇಳೆ ಸಂಚರಿಸುವವರಿಗೆ ಸಮಸ್ಯೆ ಹೆಚ್ಚಾಗಿದೆ.ರಸ್ತೆಯ ಹೊಂಡಗಳನ್ನು ಶೀಘ್ರ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.












