ಸುಬ್ರಹ್ಮಣ್ಯ, ಸೆ.6: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 37 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯದಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಬಿ.ಸಿ.ರೋಡ್ ಡಿಪೋಗೆ ಸೇರಿದ ಕೆಎಸ್ಸಾರ್ಟಿಸಿ ಬಸ್ ಎರ್ಮಾಯಿಲ್ ಸಮೀಪ ತಲುಪಿದಾಗ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರಿಗೆ ಮಾಹಿತಿ ನೀಡಿ ಅವರನ್ನು ಬಸ್ಸಿನಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಯಾಣಿಕರು ಬಸ್ಸಿನಿಂದ ಇಳಿಯುತ್ತಿದ್ದಂತೆ ಬೆಂಕಿ ಬಸ್ಸನ್ನು ಸಂಪೂರ್ಣವಾಗಿ ವ್ಯಾಪಿಸಿದೆ.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಲು ಶ್ರಮಿಸಿದ್ದಾರೆ. ಬೆಂಕಿಯ ಕೆನ್ನಾಲಗೆಗೆ ಸಿಲುಕಿದ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬೆಂಕಿ ಕಾಣಿಸಿಕೊಳ್ಳಲು ಕಾರಣವೇನೆಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!