ಉಡುಪಿ: ಬೇರೊಬ್ಬರ ಆಧಾರ್ ಕಾರ್ಡ್ ಸಂಖ್ಯೆಗೆ ಹೆಸರು ಹಾಗೂ ವಿಳಾಸ ಬದಲಾಯಿಸಿ, ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಮೋಸ ಮಾಡಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳದ ಉಮ್ಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.ನೋಮಾನ್ ಎಂಬಾತನಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುವ ಉದ್ದೇಶದಿಂದ ಫಾರೂಕ್, ಪ್ರಶಾಂತ್ ಎಂಬವರ ಆಧಾರ್ ಕಾರ್ಡ್ ಸಂಖ್ಯೆಗೆ ಕೆ.ಟಿ. ಮೊಹಮ್ಮದ್ ಎಂಬವರ ಹೆಸರು ಹಾಗೂ ವಿಳಾಸ ನಮೂದಿಸಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದಾನೆ. ಬಳಿಕ ಕೆ.ಟಿ. ಮೊಹಮ್ಮದ್ ಎಂಬ ವ್ಯಕ್ತಿಯಂತೆ ನಟಿಸಿ, ನಕಲಿ ಆಧಾರ್ ಕಾರ್ಡ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಮೋಸ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಈ ನಕಲಿ ಆಧಾರ್ ಕಾರ್ಡ್ ಅನ್ನು ಮಂಗಳೂರಿನ ನಿಶಾಂತ್ ಕುಮಾರ್ ಕಂಪ್ಯೂಟರ್ ಮೂಲಕ ಸೃಷ್ಟಿಸಿಕೊಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆಡಳಿತಾಧಿಕಾರಿ ಅಬ್ಬಾಸ್ ನೀಡಿದ ದೂರಿನ ಆಧಾರದಲ್ಲಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಗಳ ಪತ್ತೆಗಾಗಿ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಪಿ. ಅವರ ಮಾರ್ಗದರ್ಶನದಲ್ಲಿ ತನಿಖಾ ವಿಭಾಗದ ಪೊಲೀಸ್ ಉಪನಿರೀಕ್ಷಕ ರತ್ನಾಕರ ಕೆ. ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಕಾರ್ಯಾಚರಣೆ ನಡೆಸಿದ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದೆ.ಕಾರ್ಯಾಚರಣೆಯಲ್ಲಿ ಎಎಸ್‌ಐ ಲೋಕೇಶ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಸಂತೋಷ್ ಹಾಗೂ ಜಗನ್ನಾಥ್ ನಾಯ್ಕ, ಪೊಲೀಸ್ ಸಿಬ್ಬಂದಿ ಆನಂದ್, ಆನಂದಯ್ಯ, ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮಠ, ಹೇಮಂತ್ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.











