ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯ ಆರೋಪಿಸಿ ಸೆ.18ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಕರಿಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ತಿಳಿಸಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಹ್ಮಾನ್ ಕೊಲೆ ಪ್ರಕರಣದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಹಲವು ನಾಯಕರು ಧ್ವನಿ ಎತ್ತಿದ್ದರು. ಆದರೆ ಇದೀಗ ಅಂತಹ ನಾಯಕರನ್ನು ಮೂಲೆಗುಂಪು ಮಾಡಲಾಗಿದೆ ಎಂದು ಆರೋಪಿಸಿದರು.ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನಾಯಕರಿಗೆ ಸಂಘಪರಿವಾರದೊಂದಿಗೆ ವ್ಯವಹಾರಿಕ ಸಂಬಂಧಗಳಿವೆ ಎಂದು ಆರೋಪಿಸಿದ ಅವರು, ಜಿಲ್ಲೆಯ ಪ್ರಭಾವಿಗಳ ಅನೈತಿಕ ಸಂಬಂಧಗಳೇ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ದೊರೆಯಲು ಕಾರಣವಾಗಿದೆ ಎಂದು ದೂರಿದರು. ಅಲ್ಪಸಂಖ್ಯಾತ ನಾಯಕರನ್ನು ತುಳಿಯಲು ಯಾರು ಕಾರಣ ಎಂಬುದನ್ನು ಶೀಘ್ರದಲ್ಲೇ ಬಹಿರಂಗಪಡಿಸುವುದಾಗಿ ಹೇಳಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಆದರೆ ಜಿಲ್ಲೆಯಲ್ಲಿ ಕೋಮುಶಕ್ತಿಗಳನ್ನು ನಿಯಂತ್ರಿಸದಿದ್ದರೆ ಯಾವುದೇ ಅಭಿವೃದ್ಧಿಯಿಂದ ಪ್ರಯೋಜನವಿಲ್ಲ ಎಂದು ಅನ್ವರ್ ಸಾದತ್ ಹೇಳಿದರು.ಅಕ್ರಮ ವ್ಯವಹಾರಗಳ ಬಗ್ಗೆ ಸರ್ಕಾರ ಹಾಗೂ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, ಅಧಿಕಾರಿಗಳ ನೈತಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.











