ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿದೆ.ಬಂಟ್ವಾಳ ನಗರ ಠಾಣೆಯಲ್ಲಿ 2025ರಲ್ಲಿ ದಾಖಲಾಗಿದ್ದ ಅ.ಕ್ರ. 141/2025ರ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯ ಕಲಂ 4, 6, 8, 12, 19(1)(b), 21 ಹಾಗೂ ಬಿಎನ್‌ಎಸ್‌ನ ಕಲಂ 64(2)(f), 75 r/w 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಹಾಗೂ ಇತರ ಇಬ್ಬರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2)ದ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಸೆ.19ರಂದು ಅಬ್ದುಲ್ ಲತಿಫ್ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ನ್ಯಾಯಾಲಯದಲ್ಲಿ ಪ್ರಕರಣದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.











