ಧರ್ಮಸ್ಥಳ: ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಪೂರ್ವಾನುಮತಿ ಪಡೆಯದೆ ಪ್ರವೇಶಿಸಿ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಇಬ್ಬರು ಯುವಕರು ರಕ್ಷಿತಾರಣ್ಯಕ್ಕೆ ಪ್ರವೇಶಿಸಿ ವಿಡಿಯೊ ಚಿತ್ರೀಕರಣ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಅವರ ವಿರುದ್ಧ ದೂರು ದಾಖಲಿಸಿಕೊಂಡಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.ಇಬ್ಬರು ಯುವಕರು ಠಾಣೆಗೆ ಬಂದ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ಅಥವಾ ಯಾವುದೇ ರೀತಿಯ ತೊಂದರೆ ಉಂಟಾಗಿದ್ದರೆ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ. ಈ ಬಗ್ಗೆ ಚರ್ಚಿಸಿ ಅಗತ್ಯವಿದ್ದಲ್ಲಿ ದೂರು ನೀಡುವುದಾಗಿ ಯುವಕರು ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಪ್ರಸ್ತುತ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.











