ನವದೆಹಲಿ: ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣವನ್ನು ಹೊಸದಾಗಿ ತನಿಖೆ ನಡೆಸುವಂತೆ ಸೂಚಿಸಿರುವ ನ್ಯಾಯಾಲಯ, ತನಿಖೆಗಾಗಿ ಹೊಸ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ಸೌಜನ್ಯಾ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ಹೊಸದಾಗಿ ರಚನೆಯಾಗುವ ಎಸ್‌ಐಟಿ ಮೂರು ತಿಂಗಳೊಳಗೆ ಸಂಪೂರ್ಣ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದೆ.ಪ್ರಕರಣದಲ್ಲಿ ಈ ಹಿಂದೆ ತನಿಖೆ ನಡೆಸಿದ್ದ ಪೊಲೀಸ್ ಅಥವಾ ಸಿಬಿಐ ಅಧಿಕಾರಿಗಳನ್ನು ಹೊಸ ಎಸ್‌ಐಟಿಗೆ ಸೇರ್ಪಡೆಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಸಂತೋಷ್ ರಾವ್ ಅವರನ್ನು 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ದೋಷಮುಕ್ತಗೊಳಿಸಿತ್ತು. ತನಿಖೆಯಲ್ಲಿ ಗಂಭೀರ ಲೋಪಗಳಾಗಿದ್ದು, ನೈಜ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾಗಿವೆ ಎಂದು ಆರೋಪಿಸಿ ಕುಸುಮಾವತಿ ಗೌಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.ವಿಚಾರಣೆ ವೇಳೆ ಹಿಂದಿನ ಸಿಬಿಐ ತನಿಖೆಯ ಬಗ್ಗೆಯೂ ಸುಪ್ರೀಂ ಕೋರ್ಟ್ ಪ್ರಶ್ನೆಗಳನ್ನು ಎತ್ತಿತ್ತು. ಸಿಐಡಿ ತನಿಖೆಯಲ್ಲಿ ಸಂಗ್ರಹಿಸಲಾಗಿದ್ದ ಸಾಕ್ಷ್ಯಗಳನ್ನೇ ಆಧರಿಸಿ ವರದಿ ಸಿದ್ಧಪಡಿಸಲಾಗಿದ್ದು, ಸ್ವತಂತ್ರ ತನಿಖೆ ನಡೆದಿಲ್ಲ ಎಂಬ ಅಂಶದ ಕುರಿತು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತ್ತು. ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡದೇ ತನಿಖೆ ನಡೆಸಿರುವುದನ್ನೂ ನ್ಯಾಯಾಲಯ ಪ್ರಶ್ನಿಸಿತ್ತು.ಹೊಸದಾಗಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿದರೆ ಎಸ್‌ಐಟಿ ರಚಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ವಿಚಾರಣೆ ಸಂದರ್ಭದಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೇ ನ್ಯಾಯಾಲಯ ಹೊಸ ಎಸ್‌ಐಟಿ ರಚನೆಗೆ ನಿರ್ದೇಶನ ನೀಡಿದೆ.2012ರ ಅಕ್ಟೋಬರ್‌ನಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರಕ್ಕೊಳಗಾಗಿ ಕ್ರೂರವಾಗಿ ಹತ್ಯೆಯಾಗಿದ್ದರು. ಪ್ರಕರಣದಲ್ಲಿ ಸಂತೋಷ್ ರಾವ್ ಅವರನ್ನು ಪೊಲೀಸರು ಬಂಧಿಸಿದ್ದರು. 2023ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದ ಅವರನ್ನು ದೋಷಮುಕ್ತಗೊಳಿಸಿತ್ತು.2024ರಲ್ಲಿ ಕುಸುಮಾವತಿ ಅವರು ಹೊಸ ಸಿಬಿಐ ತನಿಖೆಗೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 20, 2024ರಂದು ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ ಪ್ರಕರಣದಲ್ಲಿ ಹೆಚ್ಚಿನ ತನಿಖೆಯ ಅಗತ್ಯತೆಯ ಕುರಿತು ಕೆಲವು ಅವಲೋಕನಗಳನ್ನು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಸುಮಾವತಿ ಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!