ಬೆಂಗಳೂರು: ಖಾಲಿ ಸೈಟ್‌ಗಳನ್ನು ಸ್ವಚ್ಛಗೊಳಿಸುವ ಸರ್ಕಾರದ ನಿಯಮವೇ ಭೀಕರ ಕೊಲೆ ಪ್ರಕರಣವೊಂದನ್ನು ಬಯಲಿಗೆಳೆದಿದೆ. ಸಂಪಿಗೆಹಳ್ಳಿ ಸಮೀಪದ ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ಸೈಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪತ್ನಿಯನ್ನು ಕೊಲೆ ಮಾಡಿ ಶವವನ್ನು ಎಸೆದಿದ್ದ ಆರೋಪದ ಮೇಲೆ ಪತಿಯನ್ನು ಬಂಧಿಸಿದ್ದಾರೆ.ಒಡಿಶಾ ಮೂಲದ ಸಾಗರ್ ಚಂದ್ರ ರಾವತ್ (32) ಹಾಗೂ ಅನುಸೂಯ (28) ಪ್ರೀತಿಸಿ ವಿವಾಹವಾಗಿದ್ದರು. ದಂಪತಿ ನಗರದ ವಿವಿಧ ಹೋಟೆಲ್‌ಗಳಲ್ಲಿ ಕೆಲಸ ಮಾಡುತ್ತಿದ್ದರು. ಹಣಕಾಸಿನ ವಿಚಾರವಾಗಿ ಆಗಸ್ಟ್ 11ರಂದು ದಂಪತಿ ನಡುವೆ ಜಗಳ ನಡೆದಿದ್ದು, ಈ ವೇಳೆ ಸಾಗರ್ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಕೊಲೆಯ ಬಳಿಕ ಮೂರು ದಿನಗಳ ಕಾಲ ಶವವನ್ನು ಮನೆಯಲ್ಲೇ ಇರಿಸಿಕೊಂಡಿದ್ದ ಆರೋಪಿ, ಬಳಿಕ ಮೃತದೇಹವನ್ನು ಹಾಸಿಗೆಯಲ್ಲಿ ಸುತ್ತಿ ಖಾಲಿ ಸೈಟ್‌ನಲ್ಲಿ ಎಸೆದು ಪರಾರಿಯಾಗಿದ್ದ ಎನ್ನಲಾಗಿದೆ.ಇತ್ತ ಖಾಲಿ ಜಾಗವನ್ನು ಸ್ವಚ್ಛಗೊಳಿಸಲು ಸೈಟ್ ಮಾಲೀಕರು ಕಾರ್ಮಿಕರನ್ನು ಕಳುಹಿಸಿದಾಗ, ನಾಯಿಗಳು ಕಚ್ಚಿ ತಿಂದಿದ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.ತನಿಖೆ ವೇಳೆ ಶವದ ಮೇಲಿದ್ದ ಬಟ್ಟೆಯೊಂದರ ಮಾಲ್ ಟ್ಯಾಗ್ ಪೊಲೀಸರಿಗೆ ಮಹತ್ವದ ಸುಳಿವು ನೀಡಿದೆ. ಟ್ಯಾಗ್‌ನಲ್ಲಿದ್ದ ಮಾಹಿತಿಯ ಆಧಾರದಲ್ಲಿ ಬಿಲ್ ಪತ್ತೆಹಚ್ಚಿದ ಪೊಲೀಸರು, ಬಳಿಕ ಮೃತ ಮಹಿಳೆಯ ಗುರುತನ್ನು ಪತ್ತೆಹಚ್ಚಿದ್ದಾರೆ.ಕೊಲೆ ನಡೆದ ಸುಮಾರು 20 ದಿನಗಳ ಬಳಿಕ ಆರೋಪಿ ಪತಿ ಸಾಗರ್ ಚಂದ್ರ ರಾವತ್‌ನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!