ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ನಿವಾಸಿ ಪ್ರಶಾಂತ್ ಬೆಳ್ಚಾಡ್ (41) ಅವರು ಸೆ.20ರಂದು ಸಂಜೆ ಅಲ್ಲಿದ್ದಾಗ, ಆಟೋರಿಕ್ಷಾದಲ್ಲಿ ಬಂದ ಪರಿಚಯದ ಆರೋಪಿಗಳಾದ ಅಮ್ಮುಂಜೆ ನಿವಾಸಿ ಪ್ರಶಾಂತ್ (38), ತೆಂಕಬೆಳ್ಳೂರು ನಿವಾಸಿ ರಾಮದಾಸ್ (43) ಹಾಗೂ ಬಡಗಬೆಳ್ಳೂರು ನಿವಾಸಿ ಶಂಕರ (45) ಅವರು ತಲವಾರು ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಹಲ್ಲೆಯಿಂದ ಪ್ರಶಾಂತ್ ಬೆಳ್ಚಾಡ್ ಅವರಿಗೆ ಗಂಭೀರ ರಕ್ತಗಾಯಗಳಾಗಿದ್ದು, ಪರಿಚಯದವರು ಸ್ಥಳಕ್ಕೆ ಬರುತ್ತಿರುವುದನ್ನು ಕಂಡು ಆರೋಪಿಗಳು ಪರಾರಿಯಾಗಿದ್ದರು. ಗಾಯಾಳುವನ್ನು ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 124/2026, ಕಲಂ 109, 352, 351 ಜೊತೆಗೆ 3(5) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಪ್ರಶಾಂತ್, ರಾಮದಾಸ್ ಹಾಗೂ ಶಂಕರ ಅವರನ್ನು ಬಂಧಿಸಿ, ಸೆ.25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಆರೋಪಿಗಳನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.











